ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ: ಐದು ಜಿಲ್ಲೆಗಳ ಸಭೆ ಇಂದು

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿರುವ ಬಿಜೆಪಿ ಇಂದು ಮಹತ್ತರ ಸಭೆ ಆಯೋಜಿಸಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಐದು ಜಿಲ್ಲೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಜಿಲ್ಲಾಧ್ಯಕ್ಷರು, ಜಿಲ್ಲಾ‌‌ ಪ್ರಧಾನ ಕಾರ್ಯದರ್ಶಿಗಳು, ಶಾಸಕರು, ಜಿಲ್ಲಾ ಉಸ್ತುವಾರಿಗಳು ಭಾಗವಹಿಸುತ್ತಿದ್ದಾರೆ.

ಅಭ್ಯರ್ಥಿ ಆಯ್ಕೆ, ಚುನಾವಣೆ ತಂತ್ರಗಾರಿಕೆ ಮತ್ತು ಪ್ರಚಾರದ ಕುರಿತು ಚರ್ಚಿಸಲು ಕರೆದಿರುವ ಈ ಸಭೆ ಕಳೆದ ಮೂರು ದಿನಗಳ ಹಿಂದೆಯೇ ನಿಗದಿಯಾಗಿತ್ತು. ಆದರೆ, ಯಡಿಯೂರಪ್ಪ ಅವರು ದಿಢೀರ್ ದೆಹಲಿಗೆ ತೆರಳಿದ್ದರಿಂದ ಸಭೆ ಮುಂದೂಡಿಕೆಯಾಗಿತ್ತು.