ಬೆಳಗಾವಿ: ಅಂತಾರಾಜ್ಯ ಗಡಿ ವಿವಾದ ಹಾಗೂ ಮಹದಾಯಿ ಬಗ್ಗೆ ಹಿರಿಯ ಅಧಿಕಾರಿಗಳ ಜತೆಗೆ ಚರ್ಚಿಸಿ ಸಮಸ್ಯೆ ನಿವಾರಿಸುತ್ತೇವೆ. ಮಹಾರಾಷ್ಟ್ರದ ಜತೆಗೆ ನೀರು ಹಂಚಿಕೆ ಕುರಿತು ದೆಹಲಿಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ಹಾಗೂ ಮಹದಾಯಿ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ: ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ, ಅವರ ಸಲಹೆ ಪಡೆದು ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ ಗೆದ್ದಿರುವವರಿಗೆ ಮಂತ್ರಿ ಸ್ಥಾನ ನೀಡುತ್ತೇವೆ. ಒಬ್ಬಿಬ್ಬರನ್ನು ಕೈಬಿಡುವ ಬಗ್ಗೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಮುಂದುವರಿಯುತ್ತೇವೆ. ಈಗಿರುವ ಉಪ ಮುಖ್ಯಮಂತ್ರಿ ಮುಂದುವರಿಯಲಿದ್ದಾರೆ. ಹೊಸದಾಗಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
865 ಕೋಟಿ ರೂ. ಬಿಡುಗಡೆ: ಬೆಳಗಾವಿಯ ಸುವರ್ಣಸೌಧದಲ್ಲಿ ಕನಿಷ್ಠ ಎರಡು ತಿಂಗಳಿಗೊಮ್ಮೆಯಾದರೂ ಸಚಿವ ಸಂಪುಟ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಿಂದ ಉಂಟಾಗಿರುವ ಹಾನಿ ಸರಿಪಡಿಸಲು ಮೂಲ ಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 865 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ 76.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ರಾಜ್ಯದ ಮೊದಲ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ (ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ)ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಇತರರಿದ್ದರು.