ಸಿಎಸ್‌ಕೆ ಆಲ್ರೌಂಡರ್ ಡ್ವೈನ್ ಬ್ರಾವೊ ಇನ್ನೂ ಎರಡು ಪಂದ್ಯಗಳಿಗೆ ಫಿಟ್ ಇಲ್ಲ..!

dwayne bravo
Published on

ಅಬುದಾಬಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ಡ್ವೈನ್ ಬ್ರಾವೊ, 13ನೇ ಐಪಿಎಲ್‌ನ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಮುಖ್ಯಕೋಚ್ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಬ್ರಾವೊ, ಶನಿವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಿಂದ ಹೊರಗುಳಿದಿದ್ದರು. ಗಾಯದ ಸಮಸ್ಯೆಯಿಂದಾಗಿ ಬ್ರಾವೊ ಕಳೆದ ವಾರ ಮುಕ್ತಾಯಗೊಂಡ ಕೆರಿಬಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಬೌಲಿಂಗ್ ಮಾಡದೆ, ಕೇವಲ ಬ್ಯಾಟಿಂಗ್ ಅಷ್ಟೇ ಮಾಡಿದ್ದರು.

ಬ್ರಾವೊ ಅನುಸ್ಥಿತಿಯಲ್ಲಿ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರ‌್ರನ್ ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದರು. ಬ್ಯಾಟಿಂಗ್‌ನಲ್ಲಿ 6 ಎಸೆತಗಳಿಗೆ 18 ರನ್ ಸಿಡಿಸಿದ್ದ ಕರ‌್ರನ್, 4 ಓವರ್‌ಗಳಲ್ಲಿ 28ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಬಿರುಸಿನ ಬ್ಯಾಟಿಂಗ್ ಮೂಲಕ ಸಿಎಸ್‌ಕೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕರ‌್ರನ್ ನಿರ್ವಹಣೆ ಕುರಿತು ಫ್ಲೆಮಿಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಇದೇ ವೇಳೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಅಂಬಟಿ ರಾಯುಡು ಹಾಗೂ ಫಾಫ್ ಡು ಪ್ಲೆಸಿಸ್ ಜೋಡಿಯ ನಿರ್ವಹಣೆಯನ್ನು ಕೊಂಡಾಡಿದರು.

ಶೇಖ್ ಜಯೆದ್ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್‌ಗಳಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್, ಲುಂಗಿ ಎನ್‌ಗಿಡಿ (38ಕ್ಕೆ 3) ಮಾರಕ ದಾಳಿಗೆ ನಲುಗಿ 9 ವಿಕೆಟ್‌ಗೆ 162 ರನ್ ಗಳಿಸಿತು. ಪ್ರತಿಯಾಗಿ ಸಿಎಸ್‌ಕೆ ತಂಡ ರಾಯುಡು (71ರನ್, 48 ಎಸೆತ, 6 ಬೌಂಡರಿ, 3 ಸಿಕ್ಸರ್) ಹಾಗೂ ಪ್ಲೆಸಿಸ್ (55*ರನ್, 44 ಎಸೆತ, 6 ಬೌಂಡರಿ, 3 ಸಿಕ್ಸರ್) ಜೋಡಿಯ ಬಿರುಸಿನ ಬ್ಯಾಟಿಂಗ್ ಲವಾಗಿ 19.2 ಓವರ್‌ಗಳಲ್ಲಿ 5 ವಿಕೆಟ್‌ಗೆ 163 ರನ್‌ಗಳಿಸಿ ಜಯದ ನಗೆ ಬೀರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net