ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

chenai
Published on

ಚೆನ್ನೈ: ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತಮಿಳುನಾಡು ಅಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ಇಂದು (ಜುಲೈ 5) ಪೆರಂಬೂರ್‌ನಲ್ಲಿರುವ ಅವರ ನಿವಾಸದ ಬಳಿ ಆರು ಅಪರಿಚಿತ ವ್ಯಕ್ತಿಗಳ ಗುಂಪೊಂದು ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂದು ಚೆನ್ನೈ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕೊಲೆಯ ಹಿಂದಿನ ಉದ್ದೇಶವು ಅಸ್ಪಷ್ಟವಾಗಿದೆ.

ಸೇಂಬಿಯಂ ಪೊಲೀಸರ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೇಂಬಿಯಂನ ಜನನಿಬಿಡ ಪ್ರದೇಶದಲ್ಲಿ ಆರ್ಮ್‌ಸ್ಟ್ರಾಂಗ್ ತಮ್ಮ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಮೂರು ಬೈಕ್‌ಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಂದಿದ್ದ 6 ಜನರ ಗ್ಯಾಂಗ್‌ ಏಕಾಏಕಿ ಅವರ ಮೇಲೆ ದಾಳಿ ನಡೆಸಿದೆ.

ಅಲ್ಲಿದ್ದ ಜನರು ಅವರ ರಕ್ಷಣೆಗೆ ಮುಂದಾಗುವಷ್ಟರಲ್ಲೇ ಗ್ಯಾಂಗ್‌, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್‌ ಆಗಿದೆ. ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನ ಕುಟುಂಬಸ್ಥರು ಕೂಡಲೇ ಥೌಸಂಡ್ ಲೈಟ್‌ನ ಗ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಪುಲಿಯನ್‌ತೋಪ್ ಉಪ ಪೊಲೀಸ್ ಆಯುಕ್ತ ಐ ಈಶ್ವರನ್ ಮತ್ತು ಸಹಾಯಕ ಪೊಲೀಸ್ ಆಯುಕ್ತ ಪ್ರವೀಣ್ ಕುಮಾರ್ ಹತ್ಯೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಸೆಂಬಿಯಂ ಪೊಲೀಸ್ ಇನ್ಸ್‌ಪೆಕ್ಟರ್ ಚಿರಂಜೀವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ನಿಯೋಜಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net