More

    ಬುಡಾ ಅಧ್ಯಕ್ಷರ ಬದಲಾವಣೆ ವಿವಾದ: ಕಾರ್ಯಕರ್ತರಿಗೆ ನೋವುಂಟಾಗಿದೆ ಎಂದ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ

    ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷರ ಬದಲಾವಣೆಗೆ ಸಂಬಂಧಿತ ಬೆಳವಣಿಗೆಗಳು ಪಕ್ಷದ ಕಾರ್ಯಕರ್ತರಲ್ಲಿ ನೋವುಂಟು ಮಾಡಿದೆ ಹಾಗೂ ಪಕ್ಷಕ್ಕೂ ಹಾನಿ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.

    ಬುಡಾ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಾಗೂ ಹಿರಿತನ ಪರಿಗಣಿಸಬೇಕಿತ್ತು. ಜಿಲ್ಲೆಯಲ್ಲಿ ಲೋಕಸಭೆ ಹಾಗೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳು ಮೀಸಲಿಗೆ ಒಳಪಟ್ಟಿರುವುದರಿಂದ ಜಾತಿ ಸಮೀಕರಣಕ್ಕೆ ಆದ್ಯತೆ ನೀಡಬೇಕಿತ್ತು. ಬುಡಾ ಅಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷಕ್ಕೆ ಮಾಹಿತಿ ಇರಲಿಲ್ಲ. ಈ ಬಗ್ಗೆ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ವಿವಿಧ ನೇಮಕಗಳಲ್ಲಿ ಸ್ಥಳೀಯ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕೆಂದು ಪಕ್ಷದ ವೇದಿಕೆ ನಿರ್ಧರಿಸಿತ್ತು. ಆದರೆ, ವ್ಯತಿರಿಕ್ತ ಬೆಳವಣಿಗೆಗಳು ನಡೆದಿವೆ. ಈ ಬಗ್ಗೆ ಹಿರಿಯ ನಾಯಕರು, ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಚರ್ಚಿಸಲಾಗುವುದು. ಯಾರಿಗೋ ಸಮಾಧಾನ ಮಾಡಲು ಹೋಗಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಕಾರ್ಯಕರ್ತರು ಕೂಡ ಪಕ್ಷಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು. ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಕಾರ್ಯಕರ್ತರೊಂದಿಗೆ ಮತ್ತೊಮ್ಮೆ ಚರ್ಚಿಸಿ ಸಿಎಂ ಭೇಟಿ ಮಾಡಲಾಗುವುದು. ವ್ಯವಸ್ಥೆಯಲ್ಲಿ ಬದಲಾವಣೆ ಆಗದಿದ್ದರೆ ಪಕ್ಷದ ಪದಾಧಿಕಾರಿಗಳು ಸಾಮೂಹಿಕವಾಗಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

    ಜಿಲ್ಲಾ ಉಪಾಧ್ಯಕ್ಷ ಮುರಹರಿಗೌಡ, ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಡು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವಿರೂಪಾಕ್ಷ ಗೌಡ ಗುತ್ತಿಗನೂರು, ಸಂಡೂರು ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಿ.ರಾವೇಂದ್ರ, ಜಿಪಂ ಸದಸ್ಯ ವಿಜಯ ಕುಮಾರ್, ಡಾ.ಅರುಣಾ ಕಾಮಿನೇನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts