More

    ಅಲ್ಪಸಂಖ್ಯಾತರಿಗೆ ಬಂಪರ್​; ಕಾಲೋನಿಗೆ 1 ಸಾವಿರ ಕೋಟಿ, ಫಲಾನುಭವಿ ಹೆಚ್ಚಿಸಲು ಸಿಎಂ ಸೂಚನೆ

    ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
    ಹಾಗೆಯೇ, ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
    ಗೃಹ ಕಚೇರಿ ಕೃಷ್ಣಾದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.
    ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದಿಂದ ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ನಿಂದ ಐದು ಲಕ್ಷ ರೂ. ಗೆ ಹೆಚ್ಚಿಸಬೇಕು ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಅವರು ಒಪ್ಪಿಗೆ ನೀಡಿದರು.
    ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
    ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts