ರಾಜ್ಯದಲ್ಲಿ ಭಾರತ್​ ಬಂದ್ ಭಾಗಶಃ ಯಶಸ್ವಿ: ಸಹಜ ಸ್ಥಿತಿಯತ್ತ ಜನಜೀವನ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಪಕ್ಷಗಳು, ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್​ ರಾಜ್ಯದಲ್ಲಿ ಭಾಗಶಃ ಯಶಸ್ವಿಯಾಗಿದ್ದು, ಮಧ್ಯಾಹ್ನ 3 ಗಂಟೆಯ ನಂತರ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭಗೊಂಡಿದ್ದು, ಹೊರ ಊರುಗಳಿಗೆ ತೆರಳುವ ಕೆಎಸ್​ಆರ್​ಟಿಸಿ ಬಸ್ ಸಂಚಾರವೂ ಆರಂಭವಾಗಿದೆ. ಅಂಗಡಿ ಮುಂಗಟ್ಟುಗಳು, ವ್ಯಾಪಾರ ಕೇಂದ್ರಗಳು, ಮಾಲ್​ಗಳು ತೆರೆದಿವೆ.

ಮಂಗಳೂರು, ಕಲಬುರಗಿ, ಶಿವಮೊಗ್ಗ, ಮೈಸೂರಿನಲ್ಲಿ ಬಂದ್​ ನಂತರ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ದಾವಣಗೆರೆ, ಚಾಮರಾಜನಗರ, ಕೋಲಾರ, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಎಸ್​ಆರ್​ಟಿಸಿ ಬಸ್​ ಸಂಚಾರ ಆರಂಭಗೊಂಡಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.