ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ತಲಾ 1 ಸದಸ್ಯ ಸ್ಥಾನ ಸೇರಿ ಒಟ್ಟು 3 ಸದಸ್ಯ ಸ್ಥಾನಗಳಿಗೆ ನಿಯಮಾವಳಿಯಂತೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಏ.22ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು 28 ಕೊನೇ ದಿನವಾಗಿದೆ. 29ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2ರಂದು ಉಮೇದುವಾರಿಕೆ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಮೇ 11ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಮೇ 14ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 22ರಿಂದ ಮೇ 14ರ ವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.