

C P Yogeshwara : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಪಿ. ಯೋಗೇಶ್ವರ್ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಹುಟ್ಟುಕೊಂಡಿತ್ತು. ಬಿಜೆಪಿಯಲ್ಲೇ ಇರುತ್ತಾರಾ? ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ? ಅಥವಾ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾರಾ ಎಂಬ ಚರ್ಚೆಗಳು ಹುಟ್ಟಿಕೊಂಡಿದ್ದವು. ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜತೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗೆ ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.
ಸಿ.ಪಿ. ಯೋಗೇಶ್ವರ್ ಅವರು ಇಂದು (ಅ.23) ಬೆಳಗ್ಗೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರು ಒಟ್ಟಿಗೆ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವುದು ಖಚಿತವಾಗಿದ್ದು, ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಪಕ್ಷ ಇಂದೇ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.
ಜೆಡಿಎಸ್ ಚಿಹ್ನೆ ಅಡಿಯಲ್ಲಿ ಸ್ಪರ್ಧೆ ಮಾಡುವಂತೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಆಫರ್ ಅನ್ನು ಸಿಪಿವೈ ತಿರಸ್ಕರಿಸಿದ್ದರು. ಬಿಜೆಪಿಯಿಂದ ಕಣಕ್ಕಿಳಿಯುವ ಆಸೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ನಾಯಕರು ಸರಿಯಾಗಿ ಸ್ಪಂದಿಸಲಿಲ್ಲ ಎಂದು ಸ್ವತಃ ಸಿಪಿವೈ ಆರೋಪ ಮಾಡಿದ್ದಾರೆ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು. ಆದರೆ, ಬಿಜೆಪಿ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರು ಕೊನೆಗೂ ಕಾಂಗ್ರೆಸ್ ಬಾಗಿಲನ್ನು ಬಡಿದಿದ್ದಾರೆ. ಇಂದು ಸಂಜೆ ಅಥವಾ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಲಿದೆ.
ಅ.21ರಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಯೋಗೇಶ್ವರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.
ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಯೋಗೇಶ್ವರ್, ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದರು. ನನಗೆ ಟಿಕೆಟ್ ಕೊಡಲು ಇಷ್ಟವಿರದಿದ್ದರೆ ತಮ್ಮ ಮಗನಿಗೆ ಕೊಡಲಿ ಅದನ್ನು ಬಿಟ್ಟು ನಾನು ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದೇನೆ ಎಂದು ಸುಳ್ಳು ಆರೋಪ ಮಾಡುವ ಅವಶ್ಯಕತೆ ಅವರಿಗಿಲ್ಲ. ನಾನು ಯಾವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ನನಗೆ ಜೆಡಿಎಸ್ ಚಿಹ್ನೆ ಅಡಿ ಸ್ಪರ್ಧಿಸಲು ಇಷ್ಟವಿಲ್ಲ. ನಾನು ಬಿಜೆಪಿಯಿಂದ ಸ್ಪರ್ಧೆ ಮಾಡಲು ಇಚ್ಛಿಸಿದ್ದೇನೆ. ನನ್ನ ಜನರು ಕೂಡ ಜೆಡಿಎಸ್ನಿಂದ ಸ್ಫರ್ಧೆ ಬೇಡ ಎನ್ನುತ್ತಿದ್ದಾರೆ. ಈ ವಿಚಾರವಾಗಿ ಕುಮಾರಸ್ವಾಮಿ ಬಳಿಯೂ ಚರ್ಚೆ ಮಾಡಿದ್ದೇನೆ. ಆದರೆ, ಅವರಿಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಬೇಕೆಂಬ ಆಸೆ ಇದೆ. ನಾನು ಬಿಜೆಪಿಯಿಂದಲೇ ಸ್ಪರ್ಧೆ ಮಾಡಲು ನಿರ್ಧರಿದ್ದೇನೆ. ಆದರೆ, ಯಾರೊಬ್ಬರು ನನಗೆ ಬೆಂಬಲ ಕೊಡುತ್ತಿಲ್ಲ ಎಂದು ಯೋಗೇಶ್ವರ್ ಬೇಸರ ಹೊರಹಾಕಿದ್ದರು.