More

    ಕುಷ್ಠರೋಗ ಜಾಗೃತಿಗೆ ಪ್ರಚಾರ ಕೈಗೊಳ್ಳಿ

    ಮಡಿಕೇರಿ: ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದರು.

    ನಗರದ ಜಿ.ಪಂ.ಕಚೇರಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಅನುಷ್ಠಾನ ಬಗ್ಗೆ ಮಂಗಳವಾರ ಆಯೋಜಿಸಿದ್ದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ. ಸ್ಪರ್ಶ್ ಆಂದೋಲನದ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಿ ಜಿಲ್ಲೆಯಾದ್ಯಂತ ಕಾರ್ಯಕ್ರಮ ನಡೆಸುವ ಮೂಲಕ ಯಶಸ್ವಿಗೊಳಿಸಬೇಕು. ಈ ಸಂಬಂಧ ಸಾರ್ವಜನಿಕ ಸ್ಥಳ, ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಮಾತನಾಡಿ, ಜ.30ರಿಂದ ಫೆ.13 ರವರೆಗೆ ಜಿಲ್ಲಾದ್ಯಂತ ಆಂದೋಲನ ನಡೆಯಲಿದೆ. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಒಟ್ಟು 3 ಕುಷ್ಠರೋಗ ಪ್ರಕರಣಗಳು ಪತ್ತೆಯಾಗಿದೆ. ವಿರಾಜಪೇಟೆ 2 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 1 ಪ್ರಕರಣ ಪತ್ತೆಯಾಗಿದ್ದು, ಇವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಆಂದೋಲನದ ಯಶಸ್ವಿಗಾಗಿ ರೇಡಿಯೋ, ದಿನಪತ್ರಿಕೆ ಮತ್ತು ದೂರದರ್ಶನದ ಮೂಲಕ ಕಾರ್ಯಕ್ರಮ ನಡೆಸಿ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ವ್ಯಾಪಕ ಪ್ರಚಾರ ಕೈಗೊಳ್ಳಲು ಆಶಾ ಕಾರ್ಯಕರ್ತರಿಗೆ ಸೂಚಿಸಲಾಗಿದ್ದು, ಕುಷ್ಠರೋಗದಿಂದ ಗುಣಮುಕ್ತರಾದವರನ್ನು ಕರೆತಂದು, ಅಂಥವರ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

    ಇದೇ ವೇಳೆ ಆಂದೋಲನದ 2020ರ ಭಿತ್ತಿ ಪತ್ರಗಳನ್ನು ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ ಬಿಡುಗಡೆಗೊಳಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts