ಅರಸೀಕೆರೆ: ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ತೊಂದರೆ ನೀಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಶನಿವಾರ ನಗರಕ್ಕೆ ಆಗಮಿಸಿದ್ದ ಅವರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರದ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಬಗ್ಗೆ ಸ್ಥಳೀಯ ಶಾಸಕರು ಲಘುವಾಗಿ ಮಾತನಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಂತಹ ಯಾವುದೇ ಬೆದರಿಕೆಗೆ ಯಾರೂ ಎದೆಗುಂದುವ ಅಗತ್ಯವಿಲ್ಲ.
ಶಾಸಕರ ಪ್ರವೃತ್ತಿ ಹೀಗೆಯೇ ಮುಂದುವರಿದರೆ ನಿಮ್ಮೊಂದಿಗೆ ಹೋರಾಟಕ್ಕಿಳಿಯಲು ಹಿಂದೇಟು ಹಾಕುವುದಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಸಿಡಿ ಬಿಡುಗಡೆ ರಾಜಕೀಯ ಗಿಮಿಕ್ ಆಗಿದೆ. ಮಂಗಳೂರು ಗಲಭೆ ಮುಂದಿಟ್ಟುಕೊಂಡು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಬಾರದು.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ ಎಂದರು.
ನಗರಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರನ್ನು ಮೈಸೂರು ಪೇಟಾ ತೊಡಿಸಿ,ಕೊಬ್ಬರಿ ಹಾರ ಹಾಕಿ ಸನ್ಮಾನಿಸಲಾಯಿತು. ಜಿಪಂ ಸದಸ್ಯ ಮರಿಸ್ವಾಮಿ. ಜಿವಿಟಿ ಬಸವರಾಜ್, ಎನ್.ಡಿ.ಪ್ರಸಾದ್ ಇದ್ದರು