ಇಡಿ ದಾಳಿಯಿಂದ ಸರ್ಕಾರದ ನಿಜ ಬಣ್ಣ ಬಯಲು -ಸಂಸದ ಕ್ಯಾ. ಬ್ರಿಜೇಶ್ ಚೌಟ

IMG-20240408-WA0344
Published on


ಮಂಗಳೂರು : ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದೆ. ಲೂಟಿಕೋರ ಸಿದ್ದರಾಮಯ್ಯ ಅವರ ಸರ್ಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿವೆ . ಈಗ ಇಡಿ ಪ್ರವೇಶ ಆಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ .ಮುಡಾ ಪ್ರಕರಣದಲ್ಲಿ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಬೇಕಾಗಿದ್ದ ಸಿಎಂ ಸಿದ್ದರಾಮಯ್ಯನವರು ಕುರ್ಚಿ ಉಳಿಸಿಕೊಳ್ಳಲು ತಮ್ಮ ವಿರುದ್ಧದ ಎಲ್ಲ ಗಂಭೀರ ಆರೋಪಗಳಿಂದ ನುಣುಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿರುವ ಕಾಂಗ್ರೆಸ್ ಸರ್ಕಾರದ ಮುಖವಾಡ ಈಗ ಇಡಿ ತನಿಖೆಯಿಂದ ಕಳಚಿ ಬೀಳಲಿದೆ . ಮುಡಾದಲ್ಲಿ 5,000 ಕೋಟಿ ರೂ. ಅವ್ಯವಹಾರ ನಡೆದಿದ್ದು, ಸರ್ಕಾರದ ಅವೈಜ್ಞಾನಿಕ ಉಚಿತ ಗ್ಯಾರಂಟಿ ಕೊಡುಗೆಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿಯಾಗಿದೆ. ಕರ್ನಾಟಕವನ್ನು ಲೂಟಿ ಮಾಡಿರುವ ತಪ್ಪಿತಸ್ಥರನ್ನು ಕಟಕಟೆಗೆ ತಂದು ನಿಲ್ಲಿಸುವವರೆಗೆ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net