More

    ಅಧಿಕೃತ ಲಾಂಛನ, ಚಿಹ್ನೆ ದುರ್ಬಳಕೆ ಪ್ರಕರಣ : ಕೇಂದ್ರ, ರಾಜ್ಯ ಸರ್ಕಾರಕ್ಕೆ ‘ಹೈ’ ನೋಟಿಸ್

    ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕೃತ ಲಾಂಛನ, ಚಿಹ್ನೆ ದುರ್ಬಳಕೆ ತಡೆಯಲು ಸಂಬಂಧಿಸಿದ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.ಈ ವಿಚಾರವಾಗಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

    ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶಕರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

    ಮಾನವ ಹಕ್ಕುಗಳ ಆಯೋಗ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಂವಿಧಾನಿಕ ಸಂಸ್ಥೆಗಳ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಹೋಲುವಂತಹ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಖಾಸಗಿ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ತಮ್ಮ ವಾಹನಗಳಿಗೆ ಹಾಕಿಕೊಳ್ಳುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಹೈಕೋರ್ಟ್, ಇದಕ್ಕೆ ಸಂಬಂಧಿಸಿದ ಕಾಯ್ದೆ-ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ಕಾನೂನು ಸೇವೆಗಳ ಸಮಿತಿಗೆ 2023ರ ಜೂ.9ರಂದು ನಿರ್ದೇಶನ ನೀಡಿತ್ತು. ಅದರಂತೆ ಈ ಅರ್ಜಿ ದಾಖಲಿಸಲಾಗಿದೆ.

    ರಾಷ್ಟ್ರ ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ಅಧಿನಿಯಮ-1950, ಲಾಂಛನ ಮತ್ತು ಹೆಸರು (ಅನುಚಿತ ಬಳಕೆ ನಿಷೇಧ) ನಿಯಮಗಳು-1982, ಭಾರತದ ರಾಷ್ಟ್ರ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯ್ದೆ-2005, ರಾಷ್ಟ್ರ ಲಾಂಛನ (ಬಳಕೆ ನಿಯಂತ್ರಣ) ನಿಯಮಗಳು-2007 ಮತ್ತು 2010 ಹಾಗೂ ಕರ್ನಾಟಕ ಮೋಟಾರು ವಾಹನ ಅಧಿನಿಯಮದ ನಿಯಮ (145) (ಎ) ಮತ್ತು ಕೇಂದ್ರ ಮೋಟಾರು ವಾಹನ ಅಧಿನಿಯಮದ ನಿಯಮ (50) ಮತ್ತು (51)ನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts