ಜನಗಣತಿ ಯೊಂದಿಗೆ ಜಾತಿಗಣತಿ; ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ ಸಿಕ್ಕ ಮಾನ್ಯತೆ: ಸಿಎಂ ಸಿದ್ದರಾಮಯ್ಯ | Caste Census

dk-2025-05-01t174025744-681364ba59ce1
Published on

Caste census : ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು  ಆಗ್ರಹಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು. ಅಲ್ಲದೆ, ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ

ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ,  ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು.

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಸಮೀಕ್ಷೆ

ಈ ರೀತಿಯ 2015 ರಲ್ಲಿಯೇ ನಮ್ಮ ಸರ್ಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ 192 ಕೋಟಿ ವೆಚ್ಚ ಮಾಡಿ  1. 33 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ . ಇದರಿಂದ  ಪ್ರೇರಿತವಾಗಿ ಮತ್ತು  ಬಿಹಾರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಈಗ ಸಮೀಕ್ಷೆಗೆ ಮುಂದಾಗಿದೆ ಎಂದರು.

ಮೇ 9 ಕ್ಕೆ ಸಚಿವ ಸಂಪುಟ ಸಭೆ

ಪ್ರಸಕ್ತ  ಸಚಿವ ಸಂಪುಟದಲ್ಲಿ ಮಂಡಿಸಿರುವ  ಸಾಮಾಜಿಕ , ಶೈಕ್ಷಣಿಕ ಸಮೀಕ್ಷೆಯನ್ನು ಮೇ 9 ರಂದು ನಡೆಯುವ ಸಚಿವ ಸಂಪುಟದಲ್ಲಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.

50% ಮೀಸಲಾತಿಯನ್ನು ಬದಲಾಯಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ 15 ವಿಧಿ, ಕಲಂ (5) ರಂತೆ ಮೀಸಲಾತಿಯನ್ನು ಕೊಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನು ಪರಿಗಣಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ

ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾರಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಸಚಿವರನ್ನು ಹೆದರಿಸಿ ವರದಿ ಪಡೆಯಲಿಲ್ಲ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಜಾತಿ ಗಣತಿ ಹಾಗೂ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಾಡಿ ಹೊಗಳಿದ್ದು, ರಾಜ್ಯ ಸರ್ಕಾರದ ಸಮೀಕ್ಷೆಗೆ ಯಾವುದೇ ಪಾವಿತ್ರ್ಯತೆ ಇಲ್ಲ ಏನು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಜಾತಿ ಗಣತಿ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು ಮಾಡುವುದಾಗಿ ಹೆದರಿಸಿ ವರದಿಯನ್ನು ಪಡೆಯಲಿಲ್ಲ ಎಂದರು.

ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ

ಸಮೀಕ್ಷೆಯ ಬಗ್ಗೆ ಈ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net