ರಾಜ್ಯದಲ್ಲಿ ನಾಯಕತ್ವ ಬದಲಾವಣೆ; ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಆಹ್ವಾನ | CM Siddaramaiah

ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ
Published on
ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯನ್ನು ಬಯಸಿರುವ ಕಾಂಗ್ರೆಸ್ ಹೈಕಮಾಂಡ್, ನಿನ್ನೆ ರಾಜ್ಯ ನಾಯಕತ್ವದೊಂದಿಗೆ ಸಭೆ ನಡೆಸಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯನವರಿಗೆ(CM Siddaramaiah) ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿದೆ. 
ದೆಹಲಿಯ ಇಂದಿರಾ ಭವನದಲ್ಲಿ ಮಂಗಳವಾರ ನಡೆದ ಸುದೀರ್ಘ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದು, ರಾಜ್ಯ ರಾಜಕಾರಣದ ಸಂಪೂರ್ಣ ವಿಚಾರವನ್ನು ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ 11.30 ವೇಳೆಗೆ ಪ್ರಾರಂಭಗೊಂಡ ಸಭೆ ಸಂಜೆ 5.30ರವರೆಗೆ ನಡೆದಿದ್ದು, ಈ ವೇಳೆ ಹಲವು ವಿವಿಧ ಬೆಳವಣಿಗೆ ನಡೆದವು. 
ಮೊದಲ ಹಂತದಲ್ಲಿ ಸಿಎಂ ಹಾಗೂ ಡಿಸಿಎಂರನ್ನು ಒಳಗೊಂಡಂತೆ ರಾಹುಲ್ ಗಾಂಧಿ ಸಭೆ ನಡೆಸಿ ರಾಜ್ಯ ರಾಜಕಾರಣದ ಚಿತ್ರಣವನ್ನು ಪಡೆದುಕೊಂಡರು. ಅದಾದ ಬಳಿಕ ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ರಾಹುಲ್ ಗಾಂಧಿ, ನೀವು ಕರ್ನಾಟಕದ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದೀರಿ. ಪಕ್ಷ ಈಗಾಗಲೇ ನಿಮಗೆ ಅವಕಾಶಗಳನ್ನು ನೀಡಿದ್ದು, ನೀವು ಸಹ ಇದೀಗ ಬೇರೆಯವರಿಗೆ ಅವಕಾಶ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನೀವೊಬ್ಬ ಹಿಂದುಳಿದ ವರ್ಗಗಳ ನಾಯಕರಾಗಿದ್ದು, ನಿಮ್ಮ ಅವಶ್ಯಕತೆ ದೆಹಲಿ ಮಟ್ಟದಲ್ಲಿಯೂ ಇದೆ. ಆದ್ದರಿಂದ ನೀವು ರಾಜ್ಯಸಭೆ ಚುನಾವಣೆ ಮೂಲಕ ರಾಷ್ಟ್ರರಾಜಕಾರಣಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ. 
ಆದರೆ ಸಿಎಂ ಸಿದ್ದರಾಮಯ್ಯನವರು ರಾಜ್ಯ ರಾಜಕಾರಣವನ್ನು ಬಿಟ್ಟು ಬರಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆನ್ನಲಾಗಿದೆ. ಅಲ್ಲದೆ, ಇನ್ನೂ ಎರಡು ವರ್ಷ ಸರ್ಕಾರದ ಅವಧಿ ಇರುವುದರಿಂದ ನನಗೆ ಮುಂದುವರಿಯಲು ಅವಕಾಶ ನೀಡಿ, ಮುಂದಿನ ಚುನಾವಣೆಯಲ್ಲಿ ಪುನಃ ಪಕ್ಷವನ್ನು ಸಂಘಟಿಸುವ ಮೂಲಕ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಬದ್ಧವಾಗಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಡಿಸಿಎಂ ಡಿಕೆ ಶಿವಕುಮಾ‌ರ್ ನೂತನ ಮುಖ್ಯಮಂತ್ರಿಯಾಗಿ ಬಡ್ತಿ ಪಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಎಲ್ಲ ಸಚಿವರೊಂದಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಬಳಿಕ ಮಹತ್ವದ ಬೆಳವಣಿಗೆ ನಡೆಯಲಿದೆ ಎನ್ನಲಾಗಿದೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net