ಚುನಾವಣೆ ಆಯೋಗದ ಎಸ್​ಐಆರ್ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್; ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ ಬಿಜೆಪಿ | BJP

ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published on
ನವದೆಹಲಿ: ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಸಿಂಧುತ್ವವನ್ನು ಬುಧವಾರ(ಮೇ 27) ಸುಪ್ರೀಂ ಕೋರ್ಟ್ ಎತ್ತಿಹಿಡಿದ್ದು, ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆ ಆಡಳಿತ ರೂಢ ಬಿಜೆಪಿ(BJP) ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ.
ಅಕ್ರಮ ಮತದಾರರ ಪರವಾಗಿ ನಿಂತ ಕಾರಣಕ್ಕಾಗಿಯೇ ಕಾಂಗ್ರೆಸ್ ಚುನಾವಣೆ ಆಯೋಗದ ಈ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿತ್ತು. ಈಗ ಸುಪ್ರೀಂಕೋರ್ಟ್ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ಅಜೆಂಡಾವನ್ನು ಬಯಲು ಮಾಡಿದೆ ಎಂದು ಕಿಡಿಕಾರಿದೆ.
ಎಕ್ಸ್​ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದು ಭಾರತೀಯ ಮತದಾರರಿಗಾಗಿ ಅಲ್ಲ, ಅಕ್ರಮ ನುಸುಳುಕೋರರೊಂದಿಗೆ ನಿಂತಿದ್ದರಿಂದ ಎಂಬುದು ಸ್ಪಷ್ಟವಾಗಿದೆ. ಈ ತೀರ್ಪು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ಬಯಲು ಮಾಡಿದೆ ಎಂದು ಕಿಡಿಕಾರಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸುವುದನ್ನು ರಾಷ್ಟ್ರ ವಿರೋಧಿ ಕೃತ್ಯ ಎಂದು ಬಣ್ಣಿಸಿದ ಅವರು, ಭಾರತೀಯ ಪ್ರಜಾಪ್ರಭುತ್ವವನ್ನು ಕೆಣಕಿದ್ದಕ್ಕಾಗಿ ರಾಹುಲ್ ಗಾಂಧಿಯವರು ಕ್ಷಮೆಯಾಚಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂಕೋರ್ಟ್ ನೀಡಿದ ತೀರ್ಪು ಏನು?

ಬಿಹಾರದಲ್ಲಿ ಚುನಾವಣಾ ಆಯೋಗದ SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸೇರಿಸಿ ವಿಚಾರಣೆ ನಡೆಸಿದ್ದ ಸುಪ್ರೀಂಕೊರ್ಟ್, ಇಂದು ಅಂತಿಮವಾಗಿ ತೀರ್ಪು ನೀಡಿದೆ. ಮತ್ತು SIR ಪ್ರಕ್ರಿಯೆಯನ್ನು ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದಿದೆ. ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ ಎಂದು ಹೇಳಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net