ಎಸ್ಸಿ-ಎಸ್ಟಿಗೆ ಕಾಂಗ್ರೆಸ್‌ನಿಂದ ಅನ್ಯಾಯ

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್
Published on
ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯದ ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ರಾಜ್ಯ ಸರ್ಕಾರ ವಂಚನೆ ಮಾಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿ ಸರ್ಕಾರ ಎಸ್‌ಸಿ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಏರಿಸಿತ್ತು. ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಿತ್ತು. ಮಾಧುಸ್ವಾಮಿ ವರದಿ, ಸದಾಶಿವ ಆಯೋಗವನ್ನು ಗಮನದಲ್ಲಿಟ್ಟುಕೊಂಡು ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಲಾಗಿತ್ತು.
30 ವರ್ಷಗಳ ಹೋರಾಟದ ಪ್ರತಿಫಲವಾಗಿ ಅವರಿಗೆ ನ್ಯಾಯ ಸಿಕ್ಕಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಏಕಾಏಕಿ ಎಸ್‌ಸಿ ಮೀಸಲಾತಿಯನ್ನು ಶೇ.17ರಿಂದ 15ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ.7 ರಿಂದ 3ಕ್ಕೆ ಇಳಿಸಿ ಅನ್ಯಾಯ ಮಾಡಿದೆ. ಇದರ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಕಾಂಗ್ರೆಸ್ ಸರ್ಕಾರದ ಕ್ರಮದಿಂದ ಎಸ್‌ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ. ಮೀಸಲಾತಿ ಕಡಿಮೆ ಮಾಡಲು ಮತ್ತು ಘನಂದಾರಿ ಕೆಲಸಕ್ಕೆ ಸಿದ್ದರಾಮಯ್ಯ ಸರ್ಕಾರವೇ ಬೇಕಿತ್ತೇ? ಇದೇನಾ ದಲಿತಪರ ನೀತಿ ಎಂದು ಪ್ರಶ್ನಿಸಿದರು. ಹಿಂದೆ 10 ವರ್ಷ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಮೀಸಲಾತಿ ಪ್ರಮಾಣ ಹೆಚ್ಚಿಸಿಲ್ಲ ಏಕೆ ಎಂದು ಕೇಳಿದರು. ಎಸ್‌ಟಿ ಸಮುದಾಯ ನ್ಯಾಯ ಕೇಳುತ್ತಿದೆ. ಅದಕ್ಕೆ ನಿಮ್ಮ ಉತ್ತರವೇನು ಎಂದು ಪ್ರಶ್ನೆ ಮುಂದಿಟ್ಟರು. ಮೀಸಲಾತಿ ಪ್ರಮಾಣ ಕಡಿತ ಮಾಡಿ ಎಸ್‌ಟಿಗಳಿಗೆ ಅವಮಾನ ಮಾಡಿದ್ದಾರೆ. ದಲಿತರ ಬೆನ್ನಿಗೆ ಚೂರಿ ಹಾಕಿದ್ದಾರೆ. ಇದು ದ್ವಂದ್ವ ನೀತಿ ಎಂದು ಆಕ್ಷೇಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net