ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್‌ 3ರಂದು DK Shivakumar ಪ್ರಮಾಣವಚನ!

DK Shivakumar
DK Shivakumar
Published on
ಬೆಂಗಳೂರು: ರಾಜ್ಯ ರಾಜಕಾರಣದ ದಶಕದ ದೊಡ್ಡ ನಾಯಕತ್ವ ಬದಲಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೆರೆ ಎಳೆದಿದ್ದು, ರಾಜ್ಯದ ನೂತನ ಮತ್ತು 25ನೇ ಮುಖ್ಯಮಂತ್ರಿಯಾಗಿ(DK Shivakumar) ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಸೃಷ್ಟಿಯಾಗಿದ್ದ ನಾಯಕತ್ವದ ಗೊಂದಲಗಳಿಗೆ ದೆಹಲಿ ಮಟ್ಟದಲ್ಲಿ ನಡೆದ ಸುದೀರ್ಘ ಸಂಧಾನ ಸಭೆಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಇಂದು ಸಂಜೆ ನಡೆಯುವ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಕೂಡ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.

ರಾಜ್‌ಭವನದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆ

ಸಿಎಲ್‌ಪಿ ಸಭೆಯ ನಿರ್ಣಯದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರೊಂದಿಗೆ ರಾಜ್‌ಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಿದ್ದಾರೆ. ಶಾಸಕರ ಬೆಂಬಲ ಪತ್ರವನ್ನು ಹಸ್ತಾಂತರಿಸಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರ ಬುಧವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜಿಸಲು ಸಿದ್ಧತೆಗಳು ನಡೆದಿವೆ ಎಂದು ವರದಿಯಾಗಿದೆ.
 ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಇಂಡಿ (INDIA) ಒಕ್ಕೂಟದ ಪ್ರಮುಖ ನಾಯಕರು ಆಗಮಿಸಲಿದ್ದಾರೆ.

ಸಿದ್ದರಾಮಯ್ಯ ರಾಜತಾಂತ್ರಿಕ ಬೆಂಬಲ!

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು, ಡಿ.ಕೆ. ಶಿವಕುಮಾರ್ ಅವರಿಗೆ ಪೂರ್ಣ ಬೆಂಬಲ ಘೋಷಿಸಿದ್ದಾರೆ. ಅಧಿಕಾರ ಹಸ್ತಾಂತರ ಪ್ರಕ್ರಿಯೆಯು ಅತ್ಯಂತ ಸೌಹಾರ್ದಯುತವಾಗಿ ನಡೆದಿದ್ದು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಹೊಸ ಸಚಿವರ ದಂಡು? 

ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೂನ್ 3ರಂದೇ ಕೆಲವು ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಹೊಸ ಸಿಎಂ ಆಗಮನದೊಂದಿಗೆ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಪ್ರಾದೇಶಿಕ ಮತ್ತು ಜಾತಿಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಹೊಸ ಸಚಿವರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಹಳೇ ಸಚಿವರಿಗೆ ಕೆಲವು ಪ್ರಮುಖ ಖಾತೆಗಳನ್ನು ಉಳಿಸಿಕೊಂಡು, ನಿಷ್ಠಾವಂತ ಹಾಗೂ ಯುವ ಶಾಸಕರಿಗೆ ಮಂತ್ರಿಮಂಡಲದಲ್ಲಿ ಮಣೆ ಹಾಕಲು ತೀರ್ಮಾನಿಸಲಾಗಿದೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net