IMDAlert: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ, ಎಲ್ಲೆಲ್ಲೋ ಯೆಲ್ಲೋ ಅಲರ್ಟ್!

IMDAlert
IMDAlert
Published on
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMDAlert) ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕೇವಲ ಐದು ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಉಳಿದೆಲ್ಲಾ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಲಿದ್ದು, ಸಿಡಿಲು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಹೆಚ್ಚಾಗಲಿದ್ದು, ಅಲ್ಲಿ ಜೂನ್ 2ರವರೆಗೆ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿಗೆ ಬಿಗ್ ಅಲರ್ಟ್!

ರಾಜಧಾನಿ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಹವಾಮಾನ ಇಲಾಖೆ ಹೊಸದಾಗಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ವಿಶೇಷವಾಗಿ ಇಂದು ಸಂಜೆ ಮತ್ತು ರಾತ್ರಿಯ ಅವಧಿಯಲ್ಲಿ ನಗರದಾದ್ಯಂತ ವರುಣನ ಆರ್ಭಟ ಜೋರಾಗಿರಲಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಸಿಡಿಲು ಹಾಗೂ ಮಿಂಚಿನ ಅಬ್ಬರವೂ ಇರಲಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.

ಮೆಟ್ರೋ ಪ್ರಯಾಣಿಕರಿಗೆ ಆತಂಕ

ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮೆಟ್ರೋ ಹಳಿಗಳ ಬಳಿ ಮರಗಳು ಬಿದ್ದು ನಮ್ಮ ಮೆಟ್ರೋ ಸಂಚಾರಕ್ಕೆ ಪದೇ ಪದೇ ಅಡ್ಡಿಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಮೆಟ್ರೋ ಹಳಿಗಳ ಸಮೀಪವಿರುವ ಸುಮಾರು 890 ಅಪಾಯಕಾರಿ ಮರಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕರಾವಳಿಯಲ್ಲಿ ಮಳೆ ಕ್ಷೀಣ

ರಾಜ್ಯದ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದರೆ, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಸದ್ಯಕ್ಕೆ ಮಳೆಯ ಪ್ರಭಾವ ತಗ್ಗಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಯಾವುದೇ ಪ್ರಮುಖ ಭಾರಿ ಮಳೆಯ ಮುನ್ನೆಚ್ಚರಿಕೆ ಅಥವಾ ಅಲರ್ಟ್ ಘೋಷಿಸಲಾಗಿಲ್ಲ.
ಇಂದು ಸಂಜೆ ಮತ್ತು ರಾತ್ರಿಯ ವೇಳೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ತೀವ್ರ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಜಾಗರೂಕರಾಗಿರಬೇಕು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಬಿಬಿಎಂಪಿ ಹಾಗೂ ಹವಾಮಾನ ಇಲಾಖೆ ಅಧಿಕಾರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net