

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಪ್ರಾರಂಭಿಸಿದೆ. ಪ್ರಕರಣದಲ್ಲಿ ಸಿಬಿಐ ಈಗಾಗಲೇ ಹೊಸ ಎಫ್‌ಐಆರ್ ದಾಖಲಿಸಿದ್ದು, ಸಿಬಿಐ ತಂಡ ಪ್ರಕರಣದ ತನಿಖೆಗಾಗಿ ದೆಹಲಿಯಿಂದ ಕೋಲ್ಕತ್ತಾ ತಲುಪಿದೆ.
ದೆಹಲಿಯಿಂದ ಸಿಬಿಐ ವಿಶೇಷ ವೈದ್ಯಕೀಯ ಮತ್ತು ವಿಧಿವಿಜ್ಞಾನ ತಂಡವನ್ನು ಕಳುಹಿಸಿದೆ. ಕೋಲ್ಕತ್ತಾ ತಲುಪಿದ ನಂತರ ತಂಡವು ಮೊದಲು ನ್ಯೂ ಟೌನ್ ರಾಜರಹತ್ ತಲುಪಿದ್ದು, ಬಿಎಸ್ಎಫ್ ದಕ್ಷಿಣ ಬಂಗಾಳದ ಗಡಿ ಅಧಿಕಾರಿಗಳನ್ನು ಭೇಟಿಯಾಯಿತು.
ಕಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ. ಕಲ್ಕತ್ತಾ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಸಿಬಿಐ ಕೆಲವೇ ಗಂಟೆಗಳಲ್ಲಿ ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿತು. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕರಣದ ಡೈರಿಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ಹೈಕೋರ್ಟ್ ರಾಜ್ಯ ಪೊಲೀಸರಿಗೆ ಸೂಚಿಸಿದೆ.
ಮತ್ತೊಂದೆಡೆ, ಈ ಘಟನೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ತಮ್ಮ ಕರ್ತವ್ಯವನ್ನು ಬಹಿಷ್ಕರಿಸಿ ಮುಷ್ಕರ ನಡೆಸಿದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ಆಸ್ಪತ್ರೆಯ ಸಭಾಂಗಣದಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸ್ನಾತಕೋತ್ತರ ತರಬೇತಿ ವೈದ್ಯೆಯ ಶವವನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಶನಿವಾರ ನಡೆದ ಈ ಘಟನೆಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕು ಎಂದು ಕೋರಿ ಸಂತ್ರಸ್ತೆಯ ಪೋಷಕರು ನ್ಯಾಯಾಲಯದ ಮೊರೆ ಹೋಗಿದ್ದರು. ಇದಲ್ಲದೇ ಸಿಬಿಐ ತನಿಖೆಗೆ ಆಗ್ರಹಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ.