ಖಾಸಗಿ ಶಾಲೆ ವ್ಯಾಮೋಹ ಕೈಬಿಡಿ

ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅವುಗಳ ಬಲವರ್ಧನೆಗೆ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶ್ ತಿಳಿಸಿದರು.

ನಗರದ ಸರ್ಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಶಾಲೆ ಪುನರಾರಂಭ ಹಾಗೂ ಆಂಗ್ಲ ಮಾಧ್ಯಮ ಉದ್ಘಾಟಿಸಿ ಮಾತನಾಡಿದರು.

ಪರಶುರಾಮಪುರದ ಸರ್ಕಾರಿ ಪಪೂ ಕಾಲೇಜು, ಗೋಸಿಕೆರೆ ಸಹಿಪ್ರಾ, ಕಾಮಸಮುದ್ರದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯ ನೀಡುವ ಜತೆ ಕಲಿಕೆ ಪೂರಕ ವಾತಾವರಣವಿದೆ. ಆಂಗ್ಲ ಮಾಧ್ಯಮ ಬೋಧನೆಗೆ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.

ಅಕ್ಷರ ದಾಸೋಹದ ಸಹಾಯ ನಿರ್ದೇಶಕ ತಿಪ್ಪೇಸ್ವಾಮಿ ಮಾತನಾಡಿ, ಶಿಕ್ಷಣದ ಗುಣಮಟ್ಟದ ಜತೆ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಕ್ಷೀರಭಾಗ್ಯ, ಬಿಸಿಯೂಟದ ಸೌಲಭ್ಯ ಕಲ್ಪಿಸಲಾಗಿದೆ. ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಸಿಹಿಯೂಟದೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು. ಮುಖ್ಯಶಿಕ್ಷಕರಾದ ಎಚ್. ರಾಜಣ್ಣ, ಹಂಪಣ್ಣ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಮಾರುತೇಶ್, ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಸಿಆರ್‌ಪಿ ನಿರಂಜನ್, ಮೂಡ್ಲಪ್ಪ, ಜಕಣಾಚಾರಿ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *