ಏಕಲವ್ಯ ಶಾಲೆಗೆ ಶಾಸಕ, ಜಿಲ್ಲಾಧಿಕಾರಿ ಭೇಟಿ

ಹನೂರು: ಸಮೀಪದ ಮಂಗಲ ಬಳಿಯ ಏಕಲವ್ಯ ಮಾದರಿ ವಸತಿ ಶಾಲೆಗೆ ಶಾಸಕ ಆರ್.ನರೇಂದ್ರ, ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಹಾಗೂ ಪರಿಶಿಷ್ಟ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಕೃಷ್ಣಪ್ಪ ಭಾನುವಾರ ಭೇಟಿ ನೀಡಿ ಪ್ರಾಂಶುಪಾಲನ ಲೈಂಗಿಕ ಕಿರುಕುಳದ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಶಾಲೆಯ ಪ್ರಾಂಶುಪಾಲ ಲೋಕೇಶ್ ವಿದ್ಯಾರ್ಥಿನಿಯರೊಂದಿಗೆ ದುರ್ವರ್ತನೆ ತೋರಿದ್ದ ಹಿನ್ನೆಲೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಪೊಲೀಸರಿಗೆ ದೂರು ನೀಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಬಗ್ಗೆ ಭಾನುವಾರ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ. ವಿದ್ಯಾರ್ಥಿನಿಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬಲಾಗಿದ್ದು, ಮಕ್ಕಳು ನೆಮ್ಮದಿಯಿಂದ ಇರುವಂತೆ ತಿಳಿಸಲಾಗಿದೆ. ಜತೆಗೆ ಮಕ್ಕಳ ಸುರಕ್ಷತೆಯ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಇಲ್ಲಿನ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಾಂಶುಪಾಲರ ವಿರುದ್ಧ ಕೇಳಿ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪ ಸಾಬೀತಾದಲ್ಲಿ ಕಾನೂನಿನ ಚೌಕಟ್ಟಿನಡಿ ಕ್ರಮ ಕೈಗೊಳ್ಳಲಾಗುವುದು. ಪ್ರಾಂಶುಪಾಲರನ್ನು ಅಮಾನತು ಮಾಡಬೇಕೆ ಅಥವಾ ಸೇವೆಯಿಂದ ವಜಾಗಳಿಸಬೇಕೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಆಹಾರ, ಶುಚ್ಛತೆ ಪರಿಶೀಲನೆ: ಬಳಿಕ ವಸತಿ ನಿಲಯದ ಅಡುಗೆ ಕೋಣೆ ಹಾಗೂ ಭೋಜನಾಲಯಗಳಿಗೆ ಭೇಟಿ ನೀಡಿದ ಶಾಸಕ ಹಾಗೂ ಜಿಲ್ಲಾಧಿಕಾರಿ ತಂಡ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿತು. ಭಾನುವಾರ ಮಧ್ಯಾಹ್ನದ ಊಟದ ವ್ಯವಸ್ಥೆಯ ಪಟ್ಟಿಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ವೇಳಾಪಟ್ಟಿ ಪ್ರಕಾರ ಮಧ್ಯಾಹ್ನದ ಊಟಕ್ಕೆ ಪಲಾವ್, ರಾಗಿಮುದ್ದೆ, ಚಿಕನ್ ನೀಡಬೇಕು. ಆದರೆ, ರಾಗಿಮುದ್ದೆ ಮಾಡಿಲ್ಲ, ಊಟದ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸೂಚಿಸಿದರು.
ಏಕಲವ್ಯ ಶಾಲೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳ ನಡುವೆಯೇ ಎರಡು ಗುಂಪುಗಳಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆಯೇ 2 ಗುಂಪುಗಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷವು ಅಂತಿಮ ಹಂತದಲ್ಲಿರುವುದರಿಂದ ವಿದ್ಯಾರ್ಥಿಗಳ ಮೇಲೆ ಯಾವುದೇ ರೀತಿಯಲ್ಲೂ ವ್ಯತಿರಿಕ್ತ ಪರಿಣಾಮ ಬೀರಬಾರದೆಂದು ತಿಳಿ ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಪಂ ಅಧ್ಯಕ್ಷೆ ಶಿವಮ್ಮ, ಸಾಮಾಜಿಕ ನ್ಯಾಯ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾವತಿ, ತಾಪಂ ಅಧ್ಯಕ್ಷ ರಾಜೇಂದ್ರ, ಪಪಂ ಅಧ್ಯಕ್ಷೆ ಮಮತಾ, ಮಕ್ಕಳ ಕಲ್ಯಾಣ ಸಮಿತಿ ಸಂಚಾಲಕಿ ಮೇಘಶ್ರೀ, ಮುಖಂಡರಾದ ಕೃಷ್ಣ, ರವಿಕುಮಾರ್ ಹಾಗೂ ಇನ್ನಿತರರು ಹಾಜರಿದ್ದರು.