ಮತಪಟ್ಟಿಗೆ ಹೆಸರು ಸೇರಿಸಲು ವಿಶೇಷ ಅವಕಾಶ

18 ವರ್ಷ ತುಂಬಿದವರು ಮಾ16 ರೊಳಗೆ ಹೆಸರು ಸೇರಿಸಿ

ವಿಜಯವಾಣಿ ಸುದ್ದಿಜಾಲ ಕೊಳ್ಳೇಗಾಲ
18 ವರ್ಷ ತುಂಬಿ ಇದೇ ಮೊದಲ ಬಾರಿಗೆ ಮತ ಚಲಾಯಿಸಲು ಇಚ್ಛಿಸುವವರು ಮಾ.16ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.
ತಾಲೂಕು ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಶಾಂತಿಯುತ ಮತ್ತು ಪಾರದರ್ಶಕ ಚುನಾವಣೆ ನಡೆಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ತಾಲೂಕಿನ 6 ಮುಖ್ಯ ರಸ್ತೆಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದ್ದು, ಫ್ಲೈಯಿಂಗ್ ಸ್ಕ್ವಾಡ್ ಕೂಡ ರಚಿಸಲಾಗಿದೆ ಎಂದು ತಿಳಿಸಿದರು.
ಎಲ್ಲೆಡೆ ಕಡ್ಡಾಯವಾಗಿ ಮತದಾನ ಪ್ರಕ್ರಿಯೆ ನಡೆಯುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಾರ್ವಜನಿಕರಿಗೆ ಮತಗಟ್ಟೆಗಳಲ್ಲಿ ದೊರೆಯಬೇಕಾದ ಮೂಲಸೌಕರ್ಯ ಒದಗಿಸುವ ಕುರಿತು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಡುವೆ 18 ವರ್ಷಕ್ಕೆ ಕಾಲಿಟ್ಟ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಅವಕಾಶ ಕಲ್ಪಿಸಲಾಗಿದೆ. ಇದನ್ನು ಯುವ ಪೀಳಿಗೆ ತಪ್ಪದೆ ಸದುಪಯೋಗಪಡಿಸಿಕೊಳ್ಳಲು ಹೆಚ್ಚಿನ ಪ್ರಚಾರದ ವ್ಯವಸ್ಥೆಯಾಗಬೇಕಿದೆ ಎಂದು ಹೇಳಿದರು. ಇದಕ್ಕೂ ಮುನ್ನ ತಾಲೂಕು ಕಚೇರಿಯ ಚುನಾವಣೆ ಶಾಖೆಯಲ್ಲಿ ಕೈಗೊಂಡಿರುವ ಲೋಕಸಭಾ ಚುನಾವಣೆ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಉಪ ವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಹನೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆನಂದಯ್ಯ ಮತ್ತು ತಹಸೀಲ್ದಾರ್ ವರ್ಷ ಹಾಗೂ ಶಿರಸ್ತೇದಾರ್ ಶ್ರೀನಿವಾಸ್ ಅವರೊಂದಿಗೆ ಸಭೆ ನಡೆಸಿದರು.