More

    ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ

    ಚಾಮರಾಜನಗರ: ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಯಲ್ಲಿ ಮೋಸವಾದರೆ ಕೂಡಲೇ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮೀ ಸಲಹೆ ನೀಡಿದರು.

    ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಜನರು ಅಗತ್ಯ ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು. ಸರಕು, ಸೇವೆಗಳನ್ನು ಪರಿಶೀಲಿಸಿ ಕೊಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಮಹಿಳೆಯರು ಹೆಚ್ಚಿನ ಜಾಗೃತಿ ವಹಿಸಬೇಕು. ಖರೀದಿಯಲ್ಲಿ ಯಾವುದೇ ಮೋಸವಾದರೆ ಅಗತ್ಯ ದಾಖಲೆಗಳನ್ನು ಒದಗಿಸಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ. ಸೂಕ್ತ ಪರಿಹಾರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಚಾ.ನಗರ ಲೋಕಸಭಾ ಚುನಾವಣೆ ಏ.26 ರಂದು ನಡೆಯಲಿದೆ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಬೇಕು. ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಬಾರದು. ಈ ಬಾರಿಯ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಸಖಿ ಸೌರಭ, ಅಂಗವಿಕಲರಿಗೆ ವಿಶೇಷ ಮತಗಟ್ಟೆ, ಕಲಾ ಸೊಬಗು ತೋರಿಸುವ ಮತಗಟ್ಟೆ, ಅರಣ್ಯ ಸೊಬಗು ತೋರಿಸುವ ಮತಗಟ್ಟೆ, ರೈತರಿಗಾಗಿ ಅನ್ನದಾತ ಮತಗಟ್ಟೆಗಳನ್ನು ತೆರೆಯಲಾಗುವುದು ಎಂದು ಹೇಳಿದರು.

    ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಹುಟ್ಟಿನಿಂದ ಸಾಯುವವರೆಗೂ ಗ್ರಾಹಕನಾಗಿರುತ್ತಾನೆ. ಗ್ರಾಹಕರು ನ್ಯಾಯಯುತ, ಗುಣಮಟ್ಟದಿಂದ ಕೂಡಿದ ದೋಷವಿಲ್ಲದ ವಸ್ತುಗಳನ್ನು ಖರೀದಿಸಬೇಕು. ಗ್ರಾಹಕರು ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಂ.ವಿ.ಭಾರತಿ, ಸದಸ್ಯ ಕೆ.ಎಸ್.ರಾಜು, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಪಿ.ಸವಿತಾ, ಕಾನೂನು ಮಾಪನ ಶಾಸ ಇಲಾಖೆಯ ಸಹಾಯಕ ನಿಯಂತ್ರಕ ಬಿ.ಎನ್.ರಾಜೀವ್, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕ ಬಾಲಕೃಷ್ಣ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯೋಜಕಿ ಶಿವರಾಜಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts