More

    ಜೂ. 7ರಿಂದ ಎರಡನೇ ಹಂತದ ಎಸ್ಸೆಸ್ಸೆಲ್ಸಿ ಪರೀಕ್ಷೆ

    ಚಾಮರಾಜನಗರ: ಮೊದಲನೇ ಹಂತದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ 2ನೇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಮೇ 15ರಿಂದ ಆರಂಭವಾಗುತ್ತಿರುವ ವಿಶೇಷ ತರಗತಿಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎರಡನೇ ಹಂತದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ಧತೆಗಳ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಎರಡನೇ ಹಂತದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಜೂ. 7ರಿಂದ 14ರವರೆಗೆ ನಡೆಯಲಿದ್ದು, ಕಡಿಮೆ ಸಮಯವಿರುವುದರಿಂದ ಪರೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಸಿದ್ಧತಾ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಪರಿಣಾಮಕಾರಿಯಾಗಿ ನಡೆಸಿ 2ನೇ ಹಂತದ ಪರೀಕ್ಷೆಗೆ ಸಜ್ಜುಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು 2ನೇ ಪರೀಕ್ಷೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಮುಖ್ಯವಾಗಿ ಮಕ್ಕಳಿಗೆ ಪರೀಕ್ಷಾ ಕೌಶಲ ಹಾಗೂ ಬರವಣಿಗೆ ಪ್ರಗತಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

    ಮೊದಲನೇ ಹಂತದ ಪರೀಕ್ಷೆಯಲ್ಲಿ ಜಿಲ್ಲೆಯು ಶೇ. 73.85 ಸರಾಸರಿಯೊಂದಿಗೆ ರಾಜ್ಯದಲ್ಲಿ 24ನೇ ಸ್ಥಾನ ಪಡೆದಿದೆ. ಪ್ರಸ್ತುತ 2ನೇ ಪರೀಕ್ಷೆಯಲ್ಲಿ ಇನ್ನೂ ಹೆಚ್ಚಿನ ಫಲಿತಾಂಶ ಬರಲು ಸಂಬಂಧಪಟ್ಟ ಅಧಿಕಾರಿಗಳು ಸಮಯ ವ್ಯರ್ಥ ಮಾಡದೇ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಶಾಲೆಗಳ ಪ್ರಾಂಶುಪಾಲರು, ಶಿಕ್ಷಕರು ಮಕ್ಕಳಲ್ಲಿ ಆರೋಗ್ಯಕರ ಸ್ಪರ್ಧಾಗುಣಗಳು ಹಾಗೂ ಆತ್ಮವಿಶ್ವಾಸವನ್ನು ತುಂಬುವ ಮೂಲಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತರಲು ಪ್ರೇರೇಪಿಸಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.

    ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲು ಪರೀಕ್ಷಾ ಫಲಿತಾಂಶಕ್ಕೆ ಪೂರಕವಾದ ಕಾರ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳ ಗಮನವನ್ನು ಕಲಿಕೆಯ ಆಸಕ್ತಿಯೆಡೆಗೆ ಸೆಳೆಯಬೇಕು. ಉತ್ತಮ ಫಲಿತಾಂಶ ಬಂದಿರುವ ವಿವಿಧ ಶಾಲೆಗಳ ಶಿಕ್ಷಕರನ್ನು ವಿಶೇಷ ತರಗತಿ ನಡೆಸಲು ನಿಯೋಜಿಸಬೇಕು. ಶಿಕ್ಷಣ ಇಲಾಖೆಯ ಎಲ್ಲ ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ವಿಶೇಷ ತರಗತಿಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಬೇಕು. ವಿಶೇಷ ತರಗತಿ ಸಮಯದಲ್ಲಿ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ವಿಶೇಷ ತರಗತಿಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವುದರ ಜೊತೆಗೆ ಮಕ್ಕಳಿಗೆ ಕಠಿಣವೆನಿಸುವ ವಿಷಯಗಳನ್ನು ಪದೇಪದೇ ತಿಳಿಸಿ ಅರ್ಥ ಮಾಡಿಸಬೇಕು. ಕ್ಲಿಷ್ಟಕರ ವಿಷಯಗಳಿಗೆ ಹೆಚ್ಚಿನ ಗಮನ ಕೇಂದ್ರಿಕರಿಸುವಂತೆ ಮಾಡಬೇಕು ಎಂದರು.

    ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ಜಿಲ್ಲೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಚಾಮರಾಜನಗರ ತಾಲೂಕಿನ 24, ಗುಂಡ್ಲುಪೇಟೆ 18, ಕೊಳ್ಳೇಗಾಲ 9, ಹನೂರು 19 ಮತ್ತು ಯಳಂದೂರಿನ 4 ಸೇರಿದಂತೆ ಒಟ್ಟು 74 ಶಾಲೆಗಳನ್ನು ಗುರುತಿಸಲಾಗಿದ್ದು, ಇತರೆ ಶಾಲೆಗಳ ಸಮನ್ವಯದೊಂದಿಗೆ ತರಗತಿಗಳು ಸದ್ಯದಲ್ಲಿಯೇ ಪ್ರಾರಂಭವಾಗಲಿವೆ. ಅಲ್ಲದೆ ಪರೀಕ್ಷೆ-1ರಲ್ಲಿ ಶೇ.50ಕ್ಕಿಂತ ಕಡಿಮೆ ಅಂಕ ಬಂದಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ತೆಗೆದುಕೊಳ್ಳಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದರು.

    ಇದೇ ವೇಳೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 619 ಅಂಕಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಗುಂಡ್ಲುಪೇಟೆ ಆದರ್ಶ ಶಾಲೆಯ ವಿದ್ಯಾರ್ಥಿನಿ ರತ್ನಮ್ಮ ಅವರನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು. ಉನ್ನತ ಹುದ್ದೆ ಪಡೆದು ಜಿಲ್ಲೆಗೆ ಸೇವೆ ನೀಡುವಂತೆ ಹಾರೈಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಶಿವಮೂರ್ತಿ, ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts