More

    ಮಳೆ ಹಾನಿ ತಡೆಗೆ ಡಿಸಿ ಸೂಚನೆ

    ಚಾಮರಾಜನಗರ: ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಬಹುದಾದ ಯಾವುದೇ ಜನ-ಜಾನುವಾರು ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಮಾನ್ಸೂನ್ ನಿರ್ವಹಣೆ ಸಂಬಂಧ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಮನೆ ಹಾನಿ ಮತ್ತು ಗುಡುಗು, ಸಿಡಿಲಿನಿಂದ ಜನ-ಜಾನುವಾರು ಹಾನಿ ತಡೆಯಲು ಎಲ್ಲ ಅಧಿಕಾರಿಗಳು ಕ್ಷೇತ್ರ ಪ್ರವಾಸ ಮಾಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು. ಮಳೆ ನೀರಿನಿಂದ ಕುಡಿಯುವ ನೀರು ಕಲುಷಿತಗೊಳ್ಳದಂತೆ ಗಮನಹರಿಸಬೇಕು ಎಂದರು.

    ಜಿಲ್ಲೆಯಲ್ಲಿ ವಾರದಿಂದೀಚೆಗೆ ತೀವ್ರಗೊಂಡಿರುವ ಮಳೆ-ಗಾಳಿಯಿಂದ ಸಾಕಷ್ಟು ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅದರಲ್ಲೂ 980 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಾಳೆ ಬೆಳೆಹಾನಿ ಕಂಡುಬಂದಿದ್ದು, ಅಧಿಕಾರಿಗಳು ತಕ್ಷಣವೇ ಕ್ಷೇತ್ರ ಪ್ರವಾಸ ಕೈಗೊಂಡು ಸ್ಥಳ ಮಹಜರು ಮಾಡಿ, ರೈತರಿಗೆ ಪರಿಹಾರ ವಿತರಣೆ ಮಾಡಬೇಕು. ರೈತರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕ್ರಿಯಾಶೀಲರಾಗಬೇಕು. ಜನರ ನಂಬಿಕೆ, ವಿಶ್ವಾಸ ಗಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ವಿದ್ಯುತ್ ಅವಘಡ ಉಂಟಾಗದಂತೆ ನಿಗಾ ವಹಿಸಬೇಕು. ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸ ಆಗಬೇಕು. ಕಟ್ಟಿಕೊಂಡಿರುವ ಚರಂಡಿಗಳಲ್ಲಿ ಹೂಳೆತ್ತಿಸಿ ಸ್ವಚ್ಛಗೊಳಿಸಬೇಕು. ಮಳೆ ವೇಳೆ ಕೆರೆಗಳಲ್ಲಿನ ನೀರು ರಸ್ತೆಗೆ ಬರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ಶೀಘ್ರವಾಗಿ ಆಗಬೇಕು ಎಂರು. ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಎಲ್ಲ ತಾಲೂಕು ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts