ಚಾಮರಾಜನಗರ: ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘಸಂಸ್ಥೆಗಳ ಮುಖಂಡರೊಂದಿಗೆ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ಆರಂಭದಲ್ಲಿ ಅಪರ ಜಿಲ್ಲಾಧಿಕಾರಿ ನಗರದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಸಂಘ ಸಂಸ್ಥೆಗಳ ಮುಖಂಡರು, ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳ ಅನಿಸಿಕೆ, ಅಭಿಪ್ರಾಯಗಳನ್ನು ಆಲಿಸಿದರು. ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸುವಂತಾಗಬೇಕು. ಚಾಮರಾಜನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದು ಆಗಸ್ಟ್ 15ರಂದೇ 27 ವರ್ಷಗಳನ್ನು ಪೂರೈಸುತ್ತಿರುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಚೆನ್ನಾಗಿ ನಡೆಯಬೇಕು. ಮುಖ್ಯವಾಗಿ ಶಾಲಾ ಮಕ್ಕಳಿಗೆ ಸ್ವಾತಂತ್ರ್ಯೋತ್ಸವ ಅರಿವು ಮೂಡಿಸುವ ಹಾಗೂ ದೇಶಭಕ್ತಿ ಬಿಂಬಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ಕಾರಿ ಶಾಲಾ-ಕಾಲೇಜು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿವಿಧ ಸಂಘಸಂಸ್ಥೆಗಳ ಮುಖಂಡರು ಸಲಹೆ ನೀಡಿದರು.
ಬಳಿಕ ಮಾತನಾಡಿದ ಅಪರ ಜಿಲ್ಲಾಧಿಕಾರಿ, ಆ.15ರಂದು ಬೆಳಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ, ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವಾಗತ ಸಮಿತಿ, ಸಾಂಸ್ಕೃತಿಕ ಸಮಿತಿ, ಧ್ವಜಾ ಸಿದ್ಧತಾ ಸಮಿತಿ, ವೇದಿಕೆ ಅಲಂಕಾರ ವ್ಯವಸ್ಥೆ ಸಮಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಸಮಿತಿ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿರುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ವೇದಿಕೆ ಕಾರ್ಯಕ್ರಮ ನಡೆಯುವ ಜಿಲ್ಲಾ ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೊಲೀಸ್ ಪಥಸಂಚಲನ, ಶಾಲಾ ಮಕ್ಕಳು ನಡೆಸಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಾಲೀಮು ನಡೆಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಸನ್ನದ್ಧವಾಗಿಡಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧಿಸಲಾಗಿದ್ದು ನಿಯಂತ್ರಣಕ್ಕಾಗಿ ಎಲ್ಲ ಆರ್ಟಿಒ ಹಾಗೂ ಅಬಕಾರಿ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ನಡೆಸಬೇಕೆಂದು ಸೂಚಿಸಿದರು.
ಆಹ್ವಾನ ಪತ್ರಿಕೆಗಳನ್ನು ಶಿಷ್ಟಾಚಾರ ಪ್ರಕಾರವೇ ಮುದ್ರಿಸಿ ಗಣ್ಯರಿಗೂ ವಿತರಿಸುವ ಕೆಲಸವಾಗಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಿಹಿ ವಿತರಿಸಬೇಕು. ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ಬ್ಯಾಂಕ್ಗಳಲ್ಲಿ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನಿಡಬೇಕು. ಎಲ್ಲ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ದೀಪಾಲಂಕಾರ ಮಾಡಬೇಕು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ತಹಸೀಲ್ದಾರ್ ಗಿರಿಜಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ ಇದ್ದರು.