ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇದೇ ಸೆ.15ರಂದು ಆಚರಿಸಲಾಗುತ್ತಿದ್ದು, ರಾಜ್ಯದ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಚಾಮರಾಜನಗರ ಜಿಲ್ಲೆಯವರೆಗೆ ಅತಿ ಉದ್ದದ ಮಾನವ ಸರಪಳಿ ರಚಿಸಲಾಗುತ್ತಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ ಲೋಕಸಭಾ ಸದಸ್ಯ ಸುನೀಲ್ ಬೋಸ್ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಏಕಕಾಲದಲ್ಲಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವು ರಾಜ್ಯಾದ್ಯಂತ ನಡೆಯಲಿದೆ. ಚಾಮರಾಜನಗರ ಜಿಲ್ಲೆಯಲ್ಲಿ 24 ಕಿ.ಮೀ ವ್ಯಾಪ್ತಿಯ ಮಾನವ ಸರಪಳಿ ರಚಿಸಲಾಗುತ್ತಿದ್ದು, 19,200 ಜನರು ಭಾಗವಹಿಸಲಿದ್ದಾರೆಂದು ತಿಳಿಸಿದರು.
ಚಾಮರಾಜನಗರ ಜಿಲ್ಲೆಯ ಆರಂಭದ ಸರಹದ್ದಾದ ಮೂಗೂರು ಕ್ರಾಸ್‌ನಿಂದ ಚಾಮರಾಜನಗರ ಪಟ್ಟಣದ ಪಚ್ಚಪ್ಪ ವೃತ್ತದವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಪಚ್ಚಪ್ಪ ವೃತ್ತದಿಂದ ಸುಮಾರು 1 ಕಿ.ಮೀವರೆಗೆ ಅಂದರೆ ವರ್ತಕರ ಭವನದವರೆಗೆ ಭಾರತದ ತ್ರಿವರ್ಣ ಧ್ವಜ ಹಿಡಿಯುವ ಕಾರ್ಯಕ್ರಮ ಸಹ ವಿಶೇಷವಾಗಿದೆ. ಸಂವಿಧಾನ ಪೀಠಿಕೆ ಓದುವುದು, ಸಸಿ ನೆಡುವುದು, ಇನ್ನಿತರ ವಿಶೇಷ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗಿದೆ ಎಂದು ವಿವರಿಸಿದರು.
ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ ರಚಿಸಲಾಗುವ 24 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣವು ಅತ್ಯಂತ ಗಮನಸೆಳೆಯಲಿದೆ. ಮೂಗೂರು ಕ್ರಾಸ್ ನಿಂದ ಆರಂಭವಾಗಲಿರುವ ಮಾನವ ಸರಪಳಿ ನಿರ್ಮಾಣದ ಪ್ರತೀ 100 ಮೀಟರ್ ಗೆ ವಿವಿಧ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತೀ 500ಮೀ ಓರ್ವ ತಾಲೂಕುಮಟ್ಟದ ಅಧಿಕಾರಿ ಹಾಗೂ ಪ್ರತಿ 1 ಕಿ.ಮೀ ಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ ಎಂದರು.
ಗಡಿಜಿಲ್ಲೆ ಚಾಮರಾಜನಗರದಲ್ಲಿ ಅತ್ಯಂತ ವಿಶಿಷ್ಟವಾಗಿ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ 25 ಲಕ್ಷ ಜನರು ಭಾಗವಹಿಸುತ್ತಿದ್ದು, 10 ಸಾವಿರ ಸಸಿ ನೆಡಲಾಗುತ್ತಿದೆ. ಜಿಲ್ಲೆಯ ಜನರು ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿದರು. ಇದೇ ವೇಳೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಲೋಗೊ ಒಳಗೊಂಡ ಬಿತ್ತಿ ಪತ್ರವನ್ನು ಗಣ್ಯರು ಬಿಡುಗಡೆ ಮಾಡಿದರು. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಇದ್ದರು.