

ಚಾಮರಾಜನಗರ: ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವೇ ವಿಲೇವಾರಿ ಮಾಡಿ ಅಗತ್ಯ ಪರಿಹಾರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ-1995 ಸೆಕ್ಷನ್ 4(2)ರಡಿ ದಾಖಲಿಸಲ್ಪಟ್ಟ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾದ್ಯಂತ 2015ರಿಂದ 2023ರವರೆಗೆ ಒಟ್ಟು 114 ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕು. ಪ್ರತಿ ತಾಲೂಕಿನಲ್ಲೂ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿ ಸರಿಯಾದ ಸಾಕ್ಷ್ಯಧಾರ ಒದಗಿಸಿ ಪ್ರಕರಣ ಇತ್ಯರ್ಥಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರಕರಣಗಳನ್ನು ಪೂರ್ಣ ಪ್ರಮಾಣದಲ್ಲಿ ಅರಿತು ಸಾಕ್ಷ್ಯಗಳನ್ನು ಒದಗಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಜನರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಯಾರು ಸಹ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮಿತಿಯ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಪ್ರಕರಣಗಳ ಇತ್ಯರ್ಥ ವರದಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ವರದಿ ಸಿದ್ಧಪಡಿಸಿ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಪೊಲೀಸ್ ಕಚೇರಿಯಲ್ಲಿ ಪ್ರತಿ ತಿಂಗಳು ಕ್ರೈಮ್ ಮಾನಿಟರಿಂಗ್ ಸೆಲ್ ಸ್ಥಾಪಿಸಿ ಪ್ರಕರಣವಾರು ಸವಿವರವಾಗಿ ಪರಿಶೀಲಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದರು.
ಜಿಲ್ಲಾ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ರಘು ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳ ಸಹಕಾರ ಉತ್ತಮವಾಗಿದೆ. ಜಿಲ್ಲೆಯಲ್ಲಿರುವ ಒಂದೇ ನ್ಯಾಯಾಲಯಕ್ಕೆ ಎಲ್ಲ ಬಗೆಯ ಪ್ರಕರಣಗಳು ದಾಖಲಾಗುತ್ತಿರುವುದರಿಂದ ವಿಲೇವಾರಿಗೆ ವಿಳಂಬವಾಗುತ್ತಿದೆ. ಬೇರೆ ನ್ಯಾಯಾಲಯದಲ್ಲಿ ಸದರಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉಚ್ಚನ್ಯಾಯಾಲಯದ ಅನುಮತಿ ಬೇಕಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಈ ಸಂಬಂಧ ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಕಾನೂನು ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಶ್ರೀಧರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಚಾಮರಾಜನಗರ ಡಿವೈಎಸ್ಪಿ ಲಕ್ಷ್ಮಯ್ಯ, ಕೊಳ್ಳೇಗಾಲ ಡಿವೈಎಸ್ಪಿ ಸೋಮಣ್ಣಯ್ಯ ಉಪಸ್ಥಿತರಿದ್ದರು.