More

    ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಿ

    ಚಾಮರಾಜನಗರ: ಕನ್ನಡ ರಾಜ್ಯೋತ್ಸವವನ್ನು ನ. 1ರಂದು ಆಚರಿಸಲು ಹಾಗೂ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸುವ ಗೀತಗಾಯನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸೂಚನೆ ನೀಡಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ನುಡಿ ನಮನ ಸಲ್ಲಿಸುವ ಗೀತ ಗಾಯನ ಕಾರ್ಯಕ್ರಮ ಸಂಬಂಧ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲಾಡಳಿತದ ವತಿಯಿಂದ ನ.1ರಂದು ಎಲ್ಲರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸುವ ಗೀತ ಗಾಯನಗಳ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಸರ್ಕಾರದ ನಿರ್ದೆಶನದಂತೆ 2023ರ ನ.1 ರಿಂದ 2024ರ ನ. 1 ರವರೆಗೆ ಕರ್ನಾಟಕ ಸಂಭ್ರಮ-50ರ ಆಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಯಾವುದೇ ಲೋಪವಿಲ್ಲದೇ ಆಚರಣೆ ಮಾಡಬೇಕು. ತಾಲೂಕು, ಗ್ರಾಮ ಪಂಚಾಯಿತಿ ಶಾಲಾ-ಕಾಲೇಜುಗಳು, ಬ್ಯಾಂಕುಗಳು ಸೇರಿದಂತೆ ಎಲ್ಲೆಡೆ ಆಚರಣೆ ಮಾಡಬೇಕು. ನುಡಿ ನಮನ ಗೀತೆಗಳ ಗಾಯನ ಕಾರ್ಯಕ್ರಮಕ್ಕೂ ಸೂಕ್ತ ತಾಲೀಮು ನಡೆಸಬೇಕು. ಈಗಿನಿಂದಲೇ ಸಿದ್ದತಾ ಕಾರ್ಯಗಳು ಆರಂಭವಾಗಬೇಕು. ತಾಲೂಕು ಹಂತದಲ್ಲಿಯೂ ಅಧಿಕಾರಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಗೆ ಸಭೆ ನಡೆಸಿ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ವೈವಿದ್ಯಮಯ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವ, ಕನ್ನಡ ಗೀತೆಗಳ ಗಾಯನ ಹಾಗೂ ಕರ್ನಾಟಕ ಸಂಭ್ರಮ-50ರ ಆಚರಣೆಗೆ ಪೂರಕವಾಗಿರುವ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು.

    ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಆಯೋಜನೆಗೆ ಶಾಲಾ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಂದ ಕನ್ನಡ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಪ್ರತಿಯೊಂದು ವ್ಯವಸ್ಥೆಯು ಅಚ್ಚುಕಟ್ಟಾಗಿ ಇರಬೇಕು. ಈ ಹಿಂದಿನಂತೆಯೇ ಅರ್ಥಪೂರ್ಣವಾಗಿ ಕಾರ್ಯಕ್ರಮಗಳು ನಡೆಯಲು ಬೇಕಿರುವ ಎಲ್ಲ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ತಹಶೀಲ್ದಾರ್ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಲಿಂಗಯ್ಯ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts