More

    ಮಹಿಳೆಯರು ಅನ್ಯಾಯದ ವಿರುದ್ಧ ಹೋರಾಟಮಾಡಿ

    ಚಾಮರಾಜನಗರ: ಪ್ರಸ್ತುತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದ್ದು, ತಮ್ಮ ಮೇಲಾಗುವ ಅನ್ಯಾಯದ ವಿರುದ್ಧ ಮಹಿಳೆಯರು ಹೋರಾಟ ಮಾಡುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ಭಾರತಿ ಸಲಹೆ ನೀಡಿದರು.

    ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಮಹಿಳೆಯರು ತಮ್ಮ ಜೀವನದಲ್ಲಿ ಧೈರ್ಯವನ್ನು ಬೆಳೆಸಿಕೊಳ್ಳಬೇಕು. ಇಲ್ಲದಿದ್ದರೆ ಯಾವ ಕ್ಷೇತ್ರದಲ್ಲೂ ಸಾಧನೆ ಮಾಡಲು ಸಾಧ್ಯವಿಲ್ಲ. ಅದಲ್ಲದೇ ಮಹಿಳೆಯರು ತಮ್ಮ ಕಣ್ಣು ಮುಂದೆ ನಡೆಯುವ ದೌರ್ಜನ್ಯವನ್ನು ವಿರೋಧಿಸಬೇಕು. ಇತ್ತೀಚೆಗೆ ವರದಕ್ಷಿಣೆ ಕಿರುಕುಳ ಹಾಗೂ ಬಾಲ್ಯ ವಿವಾಹ ಹೆಚ್ಚಾಗುತ್ತಿದ್ದು, ಮಹಿಳೆಯರ ಪರವಾಗಿ ಎಲ್ಲರೂ ಕೆಲಸ ಮಾಡಬೇಕು ಎಂದರು.

    ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಹೆರಿಗೆ ರಜೆಯನ್ನು ಕೊಡದೇ ದೌರ್ಜನ್ಯಮಾಡಲಾಗುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ಹಣ್ಣುಮಕ್ಕಳು ಉತ್ತಮ ಶಿಕ್ಷಣ ಪಡೆದುಕೊಂಡು, ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದರು.

    ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಮಾತನಾಡಿ, ಸಮಾಜದಲ್ಲಿ ಕಾನೂನಿನ ಭಯವಿದ್ದರೂ ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸುತ್ತದೆ. 100 ಗಂಡು ಮಕ್ಕಳಿಗೆ 95 ಹೆಣ್ಣು ಮಕ್ಕಳು ಇದ್ದು, ಲಿಂಗಾನುಪಾತದಲ್ಲೂ ಅಸಮಾನತೆ ಇದೆ. ಸಾಮಾಜಿಕವಾಗಿ ಇದರಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ. ಹೆಣ್ಣು ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಪಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಅನಾವರಣಗೊಳಿಸಬಹುದು ಎಂದರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಕಾಲೇಜಿನ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಸಂಚಾಲಕಿ ಡಾ.ಎ.ಆರ್.ಸುಷ್ಮಾ, ಉಪನ್ಯಾಸಕಿ ಅರುಣಾಶ್ರೀ, ಹಿರಿಯ ವಿದ್ಯಾರ್ಥಿನಿ ಆರ್.ಎಂ.ಮಧುಶ್ರೀ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts