

ರಾಂಚಿ : ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾದ(ಜೆಎಂಎಂ) ಹಿರಿಯ ನಾಯಕ ಚಂಪೈ ಸೊರೆನ್ ಅವರು ತಮ್ಮ ಎಕ್ಸ್ ಪ್ರೊಫೈಲ್‌ನಿಂದ ಜೆಎಂಎಂ ಹೆಸರನ್ನು ತೆಗೆದುಹಾಕಿದ್ದಾರೆ. ಇದರೊಂದಿಗೆ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಜಾರ್ಖಂಡ್‌ನಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷದ ನಾಯಕತ್ವದ ವಿರುದ್ಧ ಅವರು ಮುನಿಸಿಕೊಂಡಿದ್ದು, ಬಿಜೆಪಿಯತ್ತ ಹೆಜ್ಜೆ ಹಾಕುತ್ತಾರೆ ಎನ್ನಲಾಗುತ್ತಿದೆ. ಆದರೆ ಚಂಪೈ ಅವರು ಯಾವುದೇ ಪಕ್ಷಕ್ಕೆ ಸೇರಲ್ಲ ಎಂದು ಹೇಳುತ್ತಿದ್ದರೂ ಅವರು ಪಕ್ಷ ಬದಲಿಸುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿತ್ತು . ಅದರ ನಂತರ ಚಂಪೈ ಸೊರೆನ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ನಂತರ ಜೂ.28 ರಂದು ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿದ್ದರು. ಜುಲೈ 4 ರಂದು ಮತ್ತೊಮ್ಮೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಹೀಗಾಗಿ ಜು.3ರಂದು ಚಂಪೈ ಸಿಎಂ ಸ್ಥಾನಕ್ಕೆ ಒಲ್ಲದ ಮನಸ್ಸಿನಿಂದಲೇ ರಾಜೀನಾಮೆ ನೀಡಿದ್ದರು. ಆದರೆ, ರಾಜಕೀಯ ತಜ್ಞರ ಪ್ರಕಾರ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ಬದಲಿಸುವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನಲಾಗುತ್ತಿದೆ.