

ನವದೆಹಲಿ: 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ (Champions Trophy) ಸಂಬಂಧಿಸಿದಂತೆ ವಿಚಾರಗಳು ದಿನ ಕಳೆದತೆ ಜಟಿಲವಾಗುತ್ತಿದ್ದು, ಇದುವರೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಭದ್ರತೆಯ ಕಾರಣ (Security Reasons) ನೀಡಿ ಭಾರತ ಈಗಾಗಲೇ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದು, ಹೈಬ್ರಿಡ್ ಮಾದರಿಯಲ್ಲಿ (Hybrid Model) ಟೂರ್ನಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಹೇಳಿದೆ. ಆದರೆ, ಪಾಕಿಸ್ತಾನ ತನ್ನ ನೆಲದಲ್ಲಿ ಭಾರತ ಆಡಬೇಕೆಂದು ಹಠ ಹಿಡಿದಿರುವ ನಡುವೆಯೇ ಆಘಾತಕಾರಿ ವಿಚಾರವೊಂದು ಹೊರಬಿದ್ದಿದ್ದು, ಪಾಕಿಸ್ತಾನದ ಮುಖವಾಡ ಮತ್ತೊಮ್ಮೆ ವಿಶ್ವದ ಮುಂದೆ ಮತ್ತೊಮ್ಮೆ ಬಯಲಾಗಿದೆ.
ಉಗ್ರವಾದದಿಂದಾಗಿ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೀವ್ರ ಕುಖ್ಯಾತಿ ಪಡೆದಿರುವ ಪಾಕಿಸ್ತಾನವು ಭಾರತ ತನ್ನ ನೆಲದಲ್ಲಿ ಚಾಂಪಿಯನ್ಸ್ ಟ್ರೋಫಿ (Champions Trophy) ಆಡಬೇಕೆಂದು ಹಠ ಹಿಡಿದಿದೆ. ಭಾರತ ತಂಡಕ್ಕಾಗಿ ಲಾಹೋರ್ನ ಗಡಾಫಿ ಕ್ರೀಡಾಂಗಣ ಹಾಗೂ ಅದರ ಸುತ್ತ ಇರುವ ಐದು ಎಕರೆ ಜಾಗವನ್ನು ಖರೀದಿಸಿ ಹೋಟೆಲ್ ಕಟ್ಟುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಆದರೆ. ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ 26/11ರ ಮುಂಬೈ ದಾಳಿಯ ಮಾಸ್ಟರ್ಮೈಂಡ್, ಅಂದಿನ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ ಜಕಿ-ಉರ್-ರೆಹಮಾನ್ ಲಖ್ವಿ ಲಾಹೋರ್ನಲ್ಲಿ ಕಾಣಿಸಿಕೊಂಡಿದ್ದು, ಮುಕ್ತವಾಗಿ ತಿರುಗಾಡುತ್ತಿದ್ದಾನೆ ಎಂಬ ವಿಚಾರ ಬೆಳಕಿಗೆ ಬಂದಿದೆ.
Sports Tak ವರದಿ ಮಾಡಿರುವ ಪ್ರಕಾರ 26/11ರ ಮುಂಬೈ ದಾಳಿಯ ಮಾಸ್ಟರ್ಮೈಂಡ್, ಅಂದಿನ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ ಜಕಿ-ಉರ್-ರೆಹಮಾನ್ ಲಖ್ವಿ ಲಾಹೋರ್, ರಾವಲ್ಪಿಂಡಿಯಲ್ಲಿ ಮುಕ್ತವಾಗಿ ತಿರುಗಾಡುತ್ತಿದ್ದು, ಈ ವಿಚಾರ ಭದ್ರತೆಯ ಕುರಿತಾದ ಪ್ರಶ್ನೆಗಳನ್ನು ಉದ್ಭವಿಸುವಂತೆ ಮಾಡಿದ್ದು, ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಪಾಕ್ನ ಮುಖವಾಡ ಕಳಚಿದೆ. ಇನ್ನೂ ಈ ವಿಚಾರ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.
ಭಾರತ ತಂಡ (Team India) ಚಾಂಪಿಯನ್ಸ್ ಟ್ರೋಫಿ (Champions Trophy) ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗಲಿದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದ್ದು, ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ (Team India) ಇರುವ ಕ್ರೇಜ್ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ ಎಂಬ ನಂಬಿಕೆಯಲ್ಲಿ ಅಲ್ಲಿನ ಕ್ರಿಕೆಟ್ ಮಂಡಳಿ ಹಾಗೂ ಸರ್ಕಾರ ಕಾದು ಕುಳಿತಿದೆ. ಅಲ್ಲದೇ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಕ್ರಿಕೆಟ್ ಮೂಲಕ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ (PCB) ನಿರೀಕ್ಷೆಗೆ ಬಿಸಿಸಿಐ (BCCI) ಆಘಾತ ನೀಡಿದ್ದು, ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಕಡ್ಡಿ ಮರಿದಂತೆ ಹೇಳಿದೆ.
ಇದಲ್ಲದೆ ಭದ್ರತೆಯ ಕಾರಣದಿಂದಾಗಿ ಭಾರತದ ಪಂದ್ಯಗಳನ್ನು ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸುವುದಾಗಿ ತಿಳಿಸಿದ್ದು, ಇದಕ್ಕಾಗಿ ಕ್ರೀಡಾಂಗಣದ ಪಕ್ಕದಲ್ಲಿರುವ ಐದು ಎಕರೆ ಜಮೀನನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಭಾರತದ ಆಟಗಾರರು ಹಾಗೂ ಸಿಬ್ಬಂದಿ ಉಳಿದುಕೊಳ್ಳಲು 5 ಸ್ಟಾರ್ ಹೋಟೆಲ್ ನಿರ್ಮಿಸುತ್ತಿರುವುದಾಗಿ ಪಿಸಿಬಿ ತಿಳಿಸಿದೆ. ಇದಲ್ಲದೆ ಭಾರತ ತಂಡ ಪಾಕಿಸ್ತಾನಕ್ಕೆ ಬರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ಸ್ವಲ್ಪಮಟ್ಟಿಗೆ ಸರಿಹೋಗಬಹುದು ಎಂದು ಪಿಸಿಬಿ ಆಶಿಸಿದೆ. ಆದರೆ, ಪಾಕಿಸ್ತಾನ ಆಸೆಗೆ ಭಾರತ ತಣ್ಣೀರು ಎರಚಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.