ಎಲ್ಲ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು

ಚನ್ನರಾಯಪಟ್ಟಣ: ತಾಲೂಕಿನ ಎಲ್ಲ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಕಲ್ಪಿಸಲು 300 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ತಾಲೂಕಿನ ಮತಿಘಟ್ಟ ಗ್ರಾಮದಲ್ಲಿ ಮೈತ್ರಿ ಅಭ್ಯರ್ಥಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜುಟ್ಟನಹಳ್ಳಿ, ಹಿರೀಸಾವೆ, ನುಗ್ಗೇಹಳ್ಳಿ, ಕಲ್ಲೇಸೋಮನಹಳ್ಳಿ, ತೋಟಿಕೆರೆ ಏತನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ದಿಡಗ ಹಾಗೂ ಕಬ್ಬಳಿ ಏತನೀರಾವರಿ ಯೋಜನೆ ಬಗ್ಗೆ ಈಗಾಗಲೇ ಸಿಎಂ ಬಳಿ ಪ್ರಸ್ತಾಪಿಸಲಾಗಿದೆ ಎಂದರು.

ತಾಲೂಕಿನೆಲ್ಲೆಡೆ ನೀರಾವರಿ ವ್ಯವಸ್ಥೆ ಕಲ್ಪಿಸುವುದು ಉದ್ದೇಶ ನಮ್ಮದಾಗಿದ್ದು, ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ರೇವಣ್ಣ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.

ಜಿಪಂ ಸದಸ್ಯ ಸಿ.ಮಂಜೇಗೌಡ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಚ್.ಜಿ.ರಾಮಕೃಷ್ಣ, ಜಿಪಂ ಮಾಜಿ ಉಪಾಧ್ಯಕ್ಷ ಅಣತಿ ಶೇಖರ್ ಇತರರು ಉಪಸ್ಥಿತರಿದ್ದರು.