ಎತ್ತಿನಹೊಳೆ ಯೋಜನೆಯ 527 ಕೆರೆಗಳ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ

ಬೆಂಗಳೂರು: ಎತ್ತಿನಹೊಳೆ ಯೋಜನೆ ವ್ಯಾಪ್ತಿಯ 5 ಜಿಲ್ಲೆಗಳಲ್ಲಿರುವ 527 ಕೆರೆಗಳ ಹೂಳೆತ್ತಿ ಆ ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವಂತೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

ಬರ ಪೀಡಿತ ಜಿಲ್ಲೆಗಳಾದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು ಮತ್ತು ಅಂತರ್ಜಲ ಮರುಪೂರಣಕ್ಕಾಗಿ ಎತ್ತಿನಹೂಳೆ ಯೋಜನೆಯನ್ನು ರೂಪಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯು, ಯೋಜನೆಯಡಿ ನೀರು ಪೂರೈಸಲು ಉದ್ದೇಶಿಸಿರುವ ಕೆರೆಗಳ ಪುನಶ್ಚೇತನ ಕಾರ್ಯವನ್ನು ಯೋಜನೆಯ ಜತೆ ಸಮಾನಾಂತರವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಎತ್ತಿನ ಹೊಳೆ ಯೋಜನೆಗೆ ಮೂರು ಭೂಸ್ವಾಧೀನಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಇವರನ್ನು ತುರ್ತಾಗಿ ನೇಮಕ ಮಾಡಿ ಯೋಜನೆಗೆ ಅವಶ್ಯವಿರುವ 21 ಹಳ್ಳಿಗಳ 5000 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳುವ ಹಾಗೂ ವಶಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.