ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸೂಚನೆ

13HSN3
Published on

ಹಾಸನ: ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಜನರು ತಮ್ಮ ಸ್ವಂತ ಊರುಗಳಿಗೆ ವಾಪಸ್ಸಾಗುವುದರಿಂದ ಕರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸುವುದರ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ಏರ್ಪಡಿಸಿದ್ದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರ ಜತೆಗೆೆ ಖಾಸಗಿ ವೈದ್ಯರನೊಳ್ಳಗೊಂಡ ತಜ್ಞರ ಸಮಿತಿ ರಚಿಸಿ ಉತ್ತಮ ಚಿಕಿತ್ಸೆ ನೀಡಿ ಜೀವ ಉಳಿಸಬೇಕು ಎಂದರು.

ಜಿಲ್ಲೆಗಳಲ್ಲಿ ಹಲವಾರು ರಸ್ತೆ, ರೈಲ್ವೆ ಕಾಮಗಾರಿ ಬಾಕಿ ಉಳಿದಿದ್ದು ಭೂಮಿ ಸ್ವಾಧೀನ ಸೇರಿದಂತೆ ಇತರ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಅಲ್ಲದೆ ಪರಿಹಾರ ಧನ ಹಂಚಿಕೆಯಾಗದಿರುವುದು ಕಂಡು ಬಂದಿದೆ. ಹಾಗಾಗಿ ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಕೆಪಿಟಿಸಿಎಲ್ ಕಾರ್ಯಗಳನ್ನು ಪ್ರಾರಂಭಿಸಬೇಕು. ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಗಣಿಗಾರಿಕೆಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಹಾಗೂ ಕ್ರಷರ್ ಘಟಕಗಳಿಗೆ ಅನುಮತಿ ನೀಡಬೇಕು ಎಂದರು.

ಫಲಾನುಭವಿಗನ್ನು ಗುರುತಿಸಿ: ಈಗಾಗಲೇ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನಿವೇಶನ ನೀಡಲು ಆಯ್ಕೆ ಮಾಡಿರುವ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ನಿರ್ದೇಶಿಸಿದರಲ್ಲದೆ, ನಿವೇಶನ ನೀಡಲು ಗುರುತಿಸಿರುವ ಸರ್ಕಾರಿ ಜಾಗದಲ್ಲಿ ರಸ್ತೆಗಳನ್ನು ನರೇಗಾದಲ್ಲಿ ನಿರ್ಮಿಸಬಹು ದಾಗಿದೆ. ಪರಸ್ಪರ ಅಂತರ ಕಾಯ್ದುಕೊಂಡು ಸಭೆ ನಡೆಸಿ ಫಲಾನುಭವಿಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿಕಾರಿ ಡಾ. ನವೀನ್ ಭಟ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net