ಚಿಕ್ಕಮಗಳೂರು: ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಪೋಲಿಯೋ ಮುಕ್ತ ಭಾರತ ಎಂದು ಘೋಷಣೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಭಾನುವಾರ ನಗರದ ಜಿಲ್ಲಾ ಆಸ್ಪತ್ರೆ(ಹೆರಿಗೆ ವಿಭಾಗ) ಆವರಣದಲ್ಲಿ ಏರ್ಪಡಿಸಿದ್ದ ಲಸಿಕಾ ಅಭಿಯಾನವನ್ನು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡುವ ದೃಷ್ಟಿಯಿಂದ 1994-95ರಿಂದ ಪ್ರಾರಂಭ ಮಾಡಿದ ಪಲ್ಸ್ ಪೋಲಿಯೋ ಲಸಿಕೆಯಿಂದ ಇಂದು ಭಾರತ ಪೋಲಿಯೋ ಮುಕ್ತವಾಗಿದೆ. 2014-15ನೇ ಸಾಲಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಪೋಲಿಯೋ ಮುಕ್ತ ಭಾರತ ಎಂದು ಘೋಷಣೆ ಮಾಡಿರುವುದು ದೇಶದ ಸಾಧನೆಯಾಗಿದೆ ಎಂದರು.
ಇಂದು ಜಿಲ್ಲೆಯಾದ್ಯಂತ 74,592 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕುವ ಗುರಿ ಇದೆ. 879 ಪೋಲಿಯೋ ಲಸಿಕಾ ಬೂತ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ 75 ಸಂಚಾರಿ ಬೂತ್‌ಗಳು ಕಾರ್ಯನಿರ್ವಹಿಸುತ್ತವೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೋ ಲಸಿಕಾ ಬೂತ್‌ಗಳನ್ನು ತೆರಯಲಾಗಿದೆ. ಬೂತ್‌ಗಳಿಗೆ ಆಗಮಿಸಿ ಮಕ್ಕಳಿಗೆ ಇಂದು ಪೋಲಿಯೋ ಲಸಿಕೆ ಹಾಕಿಸದೆ ಇರುವ ಮಕ್ಕಳಿಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆಯನ್ನು ಹಾಕಲು 1894 ವಿಷೇಶ ತಂಡಗಳನ್ನು ರಚಿಸಲಾಗಿದೆ. ಮೂರು ದಿನಗಳ ಕಾಲ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಲ್ಸ್ ಪೋಲಿಯೋ ಮುಕ್ತ ಭಾರತವನ್ನು ಮಾಡಲು ಎಲ್ಲ ತಾಯಂದಿರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ಅವರು ಮನವಿ ಮಾಡಿದರು.
ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ವಿರುದ್ಧ ಹೋರಾಡಲು ಕೇವಲ ಆರೋಗ್ಯ ಇಲಾಖೆ ಸಿಬ್ಬಂದಿ ಮಾತ್ರವಲ್ಲದೆ ಸಂಘ ಸಂಸ್ಥೆಗಳು, ಸಾರ್ವಜನಿಕರು ಇದಕ್ಕೆ ಬೆಂಬಲವನ್ನು ನೀಡುತ್ತಿದ್ದಾರೆ. ಜಿಲ್ಲೆಯ ಯಾವುದೇ ಮಗುವು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಎಲ್ಲ ಮಕ್ಕಳಿಗೂ ಲಸಿಕೆಯನ್ನು ನೀಡುವ ತಯಾರಿ ಮಾಡಿಕೊಂಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್ ಕುಮಾರ್ ಕೆ., ಡಾ. ಮಂಜುನಾಥ್ ಮತ್ತಿತರರಿದ್ದರು.