More

    ಮಕ್ಕಳ ಹಕ್ಕುಗಳ ಮೇಲೆ ಪ್ರಹಾರ: ಜಿಪಂ ಸಿಇಒ ಶಾಂತಾ ಎಲ್.ಹುಲ್ಮನಿ ಬೇಸರ

    ಮಂಡ್ಯ: ಇಂದಿನ ದಿನಗಳಲ್ಲಿ ಮಕ್ಕಳ ಹಕ್ಕುಗಳ ಮೇಲೆ ಸಾಕಷ್ಟು ಪ್ರಹಾರ ಆಗುತ್ತಿದೆ. ಚಿಣ್ಣರ ರಕ್ಷಣೆಗೆ ಸರ್ಕಾರ ಹಲವಾರು ಕಾಯ್ದೆಗಳನ್ನು ರೂಪಿಸಿದೆ. ಅವುಗಳ ಬಗ್ಗೆ ತಿಳಿದುಕೊಂಡರೆ ದೌರ್ಜನ್ಯ ಸ್ಪಲ್ಪ ಮಟ್ಟಿಗೆ ತಗ್ಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ಹೇಳಿದರು.
    ನಗರದ ಎಸ್.ಬಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಎಸ್.ಬಿ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಆರ್.ಟಿ.ಇ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ. ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಎಲ್ಲ ರೀತಿಯ ಸೌಲಭ್ಯಗಳು ದೊರೆತರೆ ಉತ್ತಮ ಪ್ರಜೆಗಳಾಗಲು ಸಹಕಾರಿಯಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಸುದ್ದಿಗಳಿವೆ. ಅದನ್ನು ನಾವು ಹೋಗಲಾಡಿಸಬೇಕು. ಆದ್ದರಿಂದ ಎಲ್ಲರೂ ಸಂಘಟಿತರಾಗಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಜತೆಗೆ ಮಕ್ಕಳಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ತಲುಪಿಸ ಬೇಕು ಎಂದು ಕರೆ ನೀಡಿದರು.
    ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಳಿನಿಕುಮಾರಿ ಮಾತನಾಡಿ, ಮಂಡ್ಯದಲ್ಲಿ ಪೋಕ್ಸೋ ಕಾಯ್ದೆಗೆ ಸಂಬಂಧ ಪಟ್ಟಂತೆ ಎರಡು ನ್ಯಾಯಲಯಗಳಿವೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಆದ್ದರಿಂದ ಮಹಿಳಾ ಹಾಗೂ ಮಕ್ಕಳ ಇಲಾಖೆ ವತಿಯಿಂದ ಇನ್ನೂ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು. ಸಮಾಜ ಮಕ್ಕಳನ್ನು ಹೇಗೆ ಬಳಸಿಕೊಳ್ಳುತ್ತಿದೆ ಎಂಬುದನ್ನು ತಿಳಿದರೆ ಆ ಸಮಾಜದ ಸ್ಥಿತಿಗತಿಯನ್ನು ತಿಳಿಯಬಹುದು. ಹಾಗಾಗಿ ಮಕ್ಕಳು ಸಮಾಜದ ಪ್ರತಿಬಿಂಬದ ಕೇಂದ್ರ ಬಿಂದುಗಳು ಎಂದು ಅಭಿಪ್ರಾಯಪಟ್ಟರು.
    ಡಿವೈಎಸ್ಪಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಕೆ ಕುಮಾರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೌಭಾಗ್ಯ, ಬಿ.ಟಿ ಚಂದ್ರಕಾಂತ ಇತರರಿದ್ದರು.
    ಇದೇ ವೇಳೆ ಬಾಲ್ಯವಿವಾಹ ಮುಕ್ತಿಯತ್ತ ಕರ್ನಾಟಕ ಮಾಹಿತಿ ಕುರಿತ ಪುಸ್ತಕವನ್ನು ಗಣ್ಯರು ಬಿಡುಗಡೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts