More

    ಮಕ್ಕಳೇ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಯಕತ್ವ ಗುಣ ಮೈಗೂಡಿಸಿಕೊಳ್ಳಿ

    ಚಿಕ್ಕಮಗಳೂರು: ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಹೇಳಿದರು.
    ನಗರದ ಜಿಲ್ಲಾ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜೆವಿಎಸ್ ಶಾಲೆ ವಿದ್ಯಾರ್ಥಿಗಳ ಸಂಘದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘದಿಂದ ನಡೆಸುತ್ತಿರುವ ವಿದ್ಯಾ ಸಂಸ್ಥೆಯನ್ನು ಲಾಭಕ್ಕಾಗಿ ಸ್ಥಾಪನೆ ಮಾಡಿಲ್ಲ. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕು ಎಂಬ ಉದ್ದೇಶದಿಂದ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
    ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಆಧುನಿಕ ಕಾಲಕ್ಕೆ ತಕ್ಕಂತೆ ರೂಪುಗೊಳಿಸಿ ಮಕ್ಕಳಿಗೆ ಶಿಕ್ಷಣದ ಜತೆಗೆ ನೃತ್ಯ, ಕರಾಟೆ ಮತ್ತು ನಾಟಕ ತರಬೇತಿ ನೀಡಲಾಗುತ್ತಿದೆ. ಶಾಲೆ ಯೂನಿಯನ್ ಲೀಡರ್ ಮತ್ತು ತರಗತಿ ಲೀಡರ್‌ಗಳು ಇದನ್ನು ಅಧಿಕಾರ ಎಂದು ಭಾವಿಸದೆ ಜವಾಬ್ದಾರಿ ಎಂದು ತಿಳಿಯಬೇಕು. ಇಂದಿನಿಂದಲೇ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
    ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಪ್ರಕಾಶ್ ಮಾತನಾಡಿ, ಜೆವಿಎಸ್ ಶಾಲೆಯಲ್ಲಿ ಪ್ರಜಾಪ್ರಭುತ್ವ ಎಂದರೇನು, ಮತದಾನ ಹೇಗೆ ನಡೆಯುತ್ತದೆ, ನಮ್ಮ ಜವಾಬ್ದಾರಿಗಳೇನು ಎಂಬುದರ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಆಗ ಮಾತ್ರ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು ಬೆಳೆಯಲು ಸಾಧ್ಯ ಎಂದರು.
    ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಲಕ್ಷ್ಮಣ ಗೌಡ, ಶಾಲಾ ಸಹ ಕಾರ್ಯದರ್ಶಿ ಕೆ.ಕೆ.ಮನುಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಳ್ಳೇಗೌಡ, ವ್ಯವಸಾಪಕ ರಾಜು, ಮುಖ್ಯಶಿಕ್ಷಕ ವಿಜಿತ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts