ಚಿತ್ರದುರ್ಗ: ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯುನೈಟೆಡ್ ಸ್ಟೂಡೆಂಟ್ ಯೂನಿಯನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಎದುರು ಪ್ರತಿಭಟಿಸಿದರು.
ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳಿಂದ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಲಿದೆ. ಇವುಗಳಿಂದ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಹಕ್ಕುಗಳನ್ನು ಮೊಟಕುಗೊಳಿಸಿದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸಿದರು.
ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ಶಿಕ್ಷಣಕ್ಕೆ ಪ್ರತ್ಯೇಕ ಬಜೆಟ್ ಮೀಸಲಿಡಬೇಕು. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಹಲವು ಸಮಸ್ಯೆಗಳಿದ್ದರೂ ಸಿಎಎ ಮೂಲಕ ದೇಶದಲ್ಲಿ ಅನಗತ್ಯ ಗೊಂದಲವನ್ನು ಹುಟ್ಟು ಹಾಕಲಾಗುತ್ತಿದೆ ಎಂದು ದೂರಿದರು.
ಮೊಹಮ್ಮದ್ ಸಮೀರ್, ಅಜರ್, ಸರೋಶ್ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.