ಸಿಬ್ಬಂದಿ ನಿರ್ಲಕ್ಷ್ಯ: ಗರ್ಭಿಣಿಗೆ ರಸ್ತೆಯಲ್ಲೇ ಆಯ್ತು ಹೆರಿಗೆ

ಚಿತ್ರದುರ್ಗ: ಆರೋಗ್ಯ ಕೇಂದ್ರದ ಸಿಬ್ಬಂದಿ ತೋರಿದ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ಮಂಗಳವಾರ ಈ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ, ಆರೋಗ್ಯ ಕೇಂದ್ರದಲ್ಲಿ ಗರ್ಭಿಣಿಯನ್ನು ದಾಖಲಿಸಿಕೊಳ್ಳದೇ ವಾಪಸ್ ಕಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆರೋಗ್ಯ ಕೇಂದ್ರದಿಂದ ಮನೆಗೆ ತೆರಳುವಾಗ ಮಾರ್ಗಮಧ್ಯೆ ಹೆರಿಗೆ ನೋವು ಹೆಚ್ಚಾಗಿದೆ. ಆಗ ಗ್ರಾಮದ ಮಹಿಳೆಯರು ಸೇರಿ ಸುತ್ತಲೂ ಬಟ್ಟೆ ಹಿಡಿದು ರಸ್ತೆಯಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ-ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಗ್ಯ ಕೇಂದ್ರದ ಸಿಬ್ಬಂದಿ ತೋರಿದ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)