ಚಿತ್ರದುರ್ಗ: ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣ ಮಾಡುವ ಸಂಬಂಧ ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಲು ಉದ್ದೇಶಿಸಿದ್ದು, ರಾಜ್ಯ ಸರ್ಕಾರ ಕೇಂದ್ರದ ಕರುಡನ್ನು ವಿರೋಧಿಸಬೇಕು ಎಂದು ರೈತ ಸಂಘ ಆಗ್ರಹಿಸಿದೆ.
ಈಗಾಗಲೇ ತಮಿಳುನಾಡು ಮತ್ತು ಇತರೆ ರಾಜ್ಯ ಸರ್ಕಾರಗಳು ಕೇಂದ್ರದ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ವಿದ್ಯುತ್ ಕ್ಷೇತ್ರದಲ್ಲಿ ಈಗಾಗಲೇ ಸಾರ್ವಜನಿಕರ ಬಂಡವಾಳ ಹೂಡಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಮತ್ತು ನೈಸರ್ಗಿಕ ಸಂಪತ್ತನ್ನು ಕ್ರೋಢಿಕರಣ ಮಾಡಿಕೊಂಡಿದೆ. ಅಂತಹ ಸಂಪತ್ತನ್ನು ಖಾಸಗಿಯವರ ಪಾಲು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ ಎಂದು ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿದರೆ ರೈತರು ಮತ್ತು ಸಣ್ಣಪುಟ್ಟ ಉದ್ದಿಮೆದಾರರು, ಬಡತನ ರೇಖೆಗಿಂತ ಕಡಿಮೆ ಇರುವ ಗ್ರಾಹಕರಿಗೆ ತೊಂದರೆಯಾಗಲಿದೆ. ಕಾಯ್ದೆ ತಿದ್ದುಪಡಿಯಾದರೆ ಖಾಸಗಿ ಕಂಪನಿಗಳ ಮುಂದೆ ಮಂಡಿಯೂರಿ ಭೀಕ್ಷೆ ಬೇಡುವಂತಹ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.