ಸರ್​ ನನ್ನಿಂದ…. ಪೊಲೀಸ್​ ಕಸ್ಟಡಿಯಲ್ಲಿ ಪಶ್ಚಾತಾಪದ ಮಾತುಗಳನ್ನಾಡಿದ ನಟ ದರ್ಶನ್!​

Darshan
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರು ಅರೆಸ್ಟ್​ ಆಗಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಡಿ-ಗ್ಯಾಂಗ್​ನ ಕೃತ್ಯ ತಿಳಿದು ಎಲ್ಲರು ಶಾಕ್​ ಆಗಿದ್ದಾರೆ. ಸ್ಟಾರ್​ ನಟನೊಬ್ಬ ಇಂತಹ ಹೇಯ ಕೃತ್ಯ ಎಸಗಿದ್ದಾನೆ ಎಂಬುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸದ್ಯ ಈ ಪ್ರಕರಣ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ಆತನ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡವಿದ್ದು, ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ.

ತಪ್ಪು ಮಾಡಿದ ಬಳಿಕ ಇದೀಗ ದರ್ಶನ್​ ಪಶ್ಚಾತಾಪದ ಮಾತುಗಳನ್ನಾಡುತ್ತಿದ್ದಾರೆ. ಪರಿಚಯಸ್ಥ ಅಧಿಕಾರಿಗಳ ಬಳಿ ಬಹಳ ದುಃಖದಿಂದ ಮಾತನಾಡಿರುವ ದರ್ಶನ್ ನನ್ನಿಂದ ದೊಡ್ಡ ತಪ್ಪಾಗೋಯ್ತು​ ಎಂದಿದ್ದಾರಂತೆ. ಅಲ್ಲದೆ, ನನ್ನಿಂದಲೇ ನನ್ನ ಸಹಚರರ ಜೀವನವು ಸಹ ಹಾಳಾಯ್ತು ಎಂದು ಪೊಲೀಸ್​ ಕಸ್ಟಡಿಯಲ್ಲಿ ದರ್ಶನ್​ ಪಶ್ಚಾತಾಪದ ಮಾತುಗಳನ್ನಾಡುತ್ತಿದ್ದಾರೆ ಎಂದು ತಿಳಿಬಂದಿದೆ. ಅಲ್ಲದೆ, ಸ್ಥಳ ಮಹಜರು ಪ್ರಕ್ರಿಯೆ ನಡೆದಾಗಿನಿಂದ ದರ್ಶನ್ ತುಂಬಾ ಮಂಕಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಪವಿತ್ರಾ ಗೌಡ ಕೂಡ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ಈ ಸಮಸ್ಯೆಯನ್ನು ನಾನು ಬಗೆಹರಿಸಿಕೊಳ್ಳಬೇಕಾಗಿತ್ತು. ದರ್ಶನ್​ವರೆಗೆ ತೆಗೆದುಕೊಂಡು ಹೋಗಲೇಬಾರದಿತ್ತು. ಸೈಬರ್​ ಕ್ರೈಂಗೆ ದೂರು ನೀಡಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ. ಈ ರೀತಿ ಆಗುತ್ತದೆ ಅಂತ ಮೊದಲೇ ಗೊತ್ತಿದ್ದರೆ, ದರ್ಶನ್​ಗೆ ಈ ವಿಚಾರವನ್ನು ತಿಳಿಸುತ್ತಲೇ ಇರಲಿಲ್ಲ. ದೂರು ನೀಡಿದ್ದರೆ, ಯಾರಿಗೂ ಏನೂ ಆಗುತ್ತಿರಲಿಲ್ಲ. ಇಷ್ಟೆಲ್ಲ ಸಮಸ್ಯೆಗಳು ಸಹ ಎದುರಾಗುತ್ತಿರಲಿಲ್ಲ ಎಂದು ಪವಿತ್ರಾ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಮಂಗಳವಾರ ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಪೊಲೀಸ್​ ಕಸ್ಟಡಿಗೆ ನೀಡಿತು. ಸದ್ಯ ಪೊಲೀಸ್​ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಇಂದೇ ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್​ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಏನಿದು ಪ್ರಕರಣ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net