

ಬೆಂಗಳೂರು: ಆದಿತ್ಯ ಇದುವರೆಗೂ ಹಲವು ಚಿತ್ರಗಳಲ್ಲಿ ಮತ್ತು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿರುವುದು ರೌಡಿ ಮತ್ತು ಗ್ಯಾಂಗ್ಸ್ಟರ್ ಪಾತ್ರಗಳು. ಈಗ ಅವರು ಬಹಳ ದಿನಗಳ ನಂತರ ಮತ್ತೊಮ್ಮೆ ಅಂಡರ್ವರ್ಲ್ಡ್ ಕುರಿತಾದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರು 'ಟೆರರ್'.
'ಟೆರರ್' ಚಿತ್ರವು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡವಲ್ಲದೆ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದ ಮೊದಲ ಲುಕ್ ಬಿಡುಗಡೆಯಾಗಿದ್ದು, ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದೆ.
ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಫಸ್ಟ್ ಲುಕ್ ಹಂಚಿಕೊಂಡಿರುವ ಆದಿತ್ಯ, 'ಇದು ನನ್ನ ಮಹಾತ್ವಾಕಾಂಕ್ಷೆಯ ಚಿತ್ರವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಡಿ.14ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ' ಎಂದು ತಿಳಿಸಿದ್ದಾರೆ.
'ಟೆರರ್' ಚಿತ್ರವನ್ನು 'ಎ' ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಸಿಲ್ಕ್ ಮಂಜು ನಿರ್ಮಿಸುತ್ತಿದ್ದು, ರಂಜನ್ ಶಿವರಾಂ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಾರ್ತಿಕ್ ಶರ್ಮ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಚಿತ್ರದ ಇನ್ನಷ್ಟು ವಿವರಗಳು ಸದ್ಯದಲ್ಲೇ ಹೊರಬೀಳಬೇಕಿದೆ.