

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್, ಕೊಲೆ ಪ್ರಕರಣವೊಂದರಲ್ಲಿ ಬಂಧನವಾಗಿದ್ದಾರೆ. ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆಯಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಅಲ್ಲದೆ, ಒಳಸಂಚು ನಡೆಸಿದ ಆರೋಪದ ಮೇಲೆ ಪವಿತ್ರಾ ಗೌಡಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಈ ಪ್ರಕರಣದಿಂದ ಇಡೀ ಕನ್ನಡ ಚಿತ್ರರಂಗ ಶಾಕ್ ಆಗಿದೆ. ಅಲ್ಲದೆ, ಸ್ಟಾರ್ ನಟನೊಬ್ಬನ ಈ ಕೃತ್ಯದಿಂದ ಇಡೀ ರಾಜ್ಯವೇ ಆಘಾತಕ್ಕೆ ಒಳಗಾಗಿದೆ. ದರ್ಶನ್ ಅವರ ಈ ನಡೆಯಿಂದ ಕಂಗಾಲಾಗಿರುವ ಪತ್ನಿ ವಿಜಯಲಕ್ಷ್ಮೀ, ಇನ್ಸ್ಟಾಗ್ರಾಂನಲ್ಲಿ ದರ್ಶನ್ರನ್ನು ಅನ್ಫಾಲೋ ಮಾಡಿ, ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ದರ್ಶನ್ಗೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ದರ್ಶನ್ ಅವರ ಕುಟುಂಬ ಸಹ ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದೆ.
ದರ್ಶನ್ ಅವರ ತಾಯಿ ಮೀನಾ ತೂಗುದೀಪ್ ಮತ್ತು ಸಹೋದರ ದಿನಕರ್ ತೂಗುದೀಪ್ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಮೀನಾ ತೂಗುದೀಪ್, ದರ್ಶನ್ ಬಗ್ಗೆ ಮಾತನಾಡಲು ಒಪ್ಪುತ್ತಿಲ್ಲ. ದಿನಕರ್ ಕೂಡ ನಿರಾಕರಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನು ದರ್ಶನ್ ಅವರು ಈಗಾಗಲೇ ತಾಯಿ ಜತೆ ಜಗಳ ಮಾಡಿಕೊಂಡಿದ್ದಾರೆ. ಹೀಗಾಗಿಯೇ ಮೀನಾ ತೂಗುದೀಪ್ ಅವರು ತಮ್ಮ ಕಿರಿಯ ಪುತ್ರ ದಿನಕರ್ ಕುಟುಂಬದ ಜತೆ ಇರುವುದಾಗಿ ತಿಳಿದುಬಂದಿದೆ. ತಾನು ಹುಟ್ಟಿ ಬೆಳೆದ ಮೈಸೂರಿನಲ್ಲಿರುವ ಮನೆಗೆ ದರ್ಶನ್ ಇತ್ತೀಚಿಗೆ ಒಮ್ಮೆಯೂ ಬಂದಿಲ್ಲ ಎಂದು ಹೇಳಲಾಗಿದೆ. ದರ್ಶನ್ ಅವರ ನಿರಂತರ ವಿವಾದಗಳಿಂದ ಇಡೀ ಕುಟುಂಬ ಬೇಸತ್ತಿರುವುದಾಗಿ ತಿಳಿದುಬಂದಿದೆ.
ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.