

ಬೆಂಗಳೂರು: ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಭಾರತದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಸಿನಿಮಾ ಗಮನಂ. ಫ್ಯಾಷನ್ ಡಿಸೈನಿಂಗ್ ಕಲಿತು, ಎಡಿಟಿಂಗ್ ಕೋರ್ಸ್ ಮುಗಿಸಿ, ದೆಹಲಿಯ ರಂಗಭೂಮಿಯಲ್ಲಿ ಕಾರ್ಯ ನಿರ್ವಹಿಸಿ, ಜತೆಗೆ ಸಾಕಷ್ಟು ಜಾಹೀರಾತುಗಳನ್ನು ನಿರ್ದೇಶಿಸಿದ್ದವರು ಸುಜನಾ ರಾವ್. ಈಗ ಗಮನಂ ಮೂಲಕ ನಿರ್ದೇಶಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ.
ಈ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ಖ್ಯಾತ ಕಲಾವಿದರಿದ್ದಾರೆ. ಹಿರಿಯ ನಟ ಚಾರು ಹಾಸನ್, ಶ್ರಿಯಾ ಸರಣ್, ಪ್ರಿಯಾಂಕಾ ಜವಾಲ್ಕರ್, ಶಿವ ಕಂದುಕುರಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದು, ಸಂಜಯ್ ಸ್ವರೂಪ್, ಇಂದೂ ಆನಂದ್, ಪ್ರಿಯಾ, ಸುಹಾಸ್, ಮಾಸ್ಟರ್ ನೇಹಾಂತ್, ಬಿತಿರಿ ಸತ್ತಿ, ರವಿಪ್ರಕಾಶ್ ಮುಂತಾದ ಕಲಾವಿದರು ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲ ಅತಿಥಿ ಪಾತ್ರದಲ್ಲಿ ಗಾಯಕಿಯಾಗಿ ನಿತ್ಯಾ ಮೆನನ್ ಕಾಣಿಸಿಕೊಂಡಿದ್ದಾರೆ.
ಬದುಕಲ್ಲಿ ಒಬ್ಬೊಬ್ಬರದ್ದೂ ಒಂದೊಂದು ಹಂಬಲಿಕೆ, ಹುಡುಕಾಟ, ಪರದಾಟಗಳಿರುತ್ತವೆ. ಅದರ ನಡುವೆ ವಿಷಾದ, ನೋವು, ನಲಿವು ಎಲ್ಲವೂ ಸೇರಿಕೊಂಡಿರುತ್ತದೆ. ಮುರಿದುಬಿದ್ದ ಕನಸುಗಳನ್ನೆಲ್ಲಾ ಹರವಿಕೊಂಡು, ಮತ್ತೆ ಜೋಡಿಸಲು ಆದೀತಾ ಅಂತಾ ಆಸೆ ಪಡುವವರು, ಅವರೆದುರು ಕೂತು ʻಇನ್ನೆಲ್ಲಿ ಸಾಧ್ಯʼ ಎಂದು ಅಣಕಿಸಿ ಹೈರಾಣಾಗಿಸುವ ವಾಸ್ತವ. ಯಾರೆಂದರೆ ಯಾರಿಗೂ ಕೇಡು ಬಯಸದ ನಿರ್ಗತಿಕ ಜೀವಗಳು – ಹೀಗೆ ನಗರ ಜೀವನದಲ್ಲಿ ಕಾಣಸಿಗುವ ಒಂದಷ್ಟು ವಿಚಾರಗಳು ʻಗಮನಂʼ ಚಿತ್ರದ ಕಥಾವಸ್ತು.
ಹಿರಿಯ ಸಂಗೀತ ನಿರ್ದೇಶಕ, ಸಂಗೀತ ಜ್ಞಾನಿ ಇಳಯರಾಜಾ ʻಗಮನಂʼಗೆ ಸ್ವರ ಸಂಯೋಜನೆ ಮಾಡಿದ್ದಾರೆ. ಹಿಂದಿಯ ಮಣಿಕರ್ಣಿಕಾ, ತೆಲುಗಿನ ಗೌತಮೀಪುತ್ರ ಶಾತಕರ್ಣಿ, ವೇದಂ ಮೊದಲಾದ ಸಿನಿಮಾಗಳಿಗೆ ಕ್ಯಾಮರಾ ಕೆಲಸ ನಿರ್ವಹಿಸಿದ್ದ ಜ್ಞಾನಶೇಖರ್ ವಿ.ಎಸ್. ಛಾಯಾಗ್ರಹಣ, ಸಾಯಿ ಮಾಧವ ಬುರಾ ಸಂಭಾಷಣೆ ಬರೆದಿರುವ ʻಗಮನಂʼ ಚಿತ್ರವನ್ನು ರಮೇಶ್ ಕರುತೂರಿ ಮತ್ತು ವೆಂಕಿ ಪುಶದಾಪು ಮತ್ತು ಜ್ಞಾನಶೇಖರ್ ವಿ.ಎಸ್. ಸೇರಿ ಕ್ರಿಯಾ ಫಿಲ್ಮ್ಸ್ ಕಾರ್ಪ್ ಮೂಲಕ ನಿರ್ಮಾಣ ಮಾಡಿದ್ದಾರೆ.