

ಬೆಂಗಳೂರು: ಪುನೀತ್ ರಾಜಕುಮಾರ್ ಅವರಿಗೆ ನವೆಂಬರ್ 1ರಂದು ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಘೋಷಿಸಿದ್ದಾರೆ. ಈಗ ಈ ಸಮಾರಂಭಕ್ಕೆ ದಕ್ಷಿಣ ಭಾರತದ ಜನಪ್ರಿಯ ನಟರಾದ ಮತ್ತು ಪುನೀತ್ ರಾಜಕುಮಾರ್ ಅವರ ಆತ್ಮೀಯರಾಗಿದ್ದ ರಜನಿಕಾಂತ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಅವರನ್ನು ಸರ್ಕಾರದ ವತಿಯಿಂದ ಆಹ್ವಾನಿಸಲಾಗಿದೆ ಎಂಬ ಸುದ್ದಿ ಇದೆ.
ಕಳೆದ ವರ್ಷ ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಪುನೀತ್ ನಿಧನರಾದರು. ಅವರ ಸಮಾಜ ಸೇವೆ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಎಂದು ಅವರ ಅಭಿಮಾನಿಗಳು ಆಗ್ರಹಿಸಿದ್ದರು. ಈ ಸಂಬಂಧ ಅರಮನೆ ಮೈದಾನದಲ್ಲಿ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ, ಪುನೀತ್ ಅವರಿಗೆ ಮರಣೋತ್ತ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದರು.
ಪುನೀತ್ ಅವರಿಗೆ ಪ್ರಶಸ್ತಿ ಘೋಷಣೆಯಾದರೂ, ಯಾವಾಗ ವಿತರಿಸಲಾಗುವುದು ಎಂಬ ವಿಷಯ ಬಹಿರಂಗವಾಗಿರಲಿಲ್ಲ. ಕೆಲವು ತಿಂಗಳುಗಳ ಹಿಂದೆ ಲಾಲ್ಬಾಗ್ ಫಲಪುಷ್ಪ ಪ್ರದರ್ಶನದ ಸಂದರ್ಭದಲ್ಲಿ ಪುನೀತ್ ಅವರಿಗೆ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ಒಂದರಂದು ಪ್ರಶಸ್ತಿ ವಿತರಿಸಲಾಗುವುದು ಎಂದು ಘೋಷಿಸಲಾಗಿತ್ತು. ಇತ್ತೀಚೆಗೆ, ನಡೆದ 'ಪುನೀತ ಪರ್ವ' ಕಾರ್ಯುಕ್ರಮದಲ್ಲೂ ಮುಖ್ಯಮಂತ್ರಿಗಳು ಕನ್ನಡ ರಾಜ್ಯೊತ್ಸವದಂದು ಅವರಿಗೆ ರಾಜ್ಯದ ಜನತೆಯ ಪರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದ್ದರು.
ವಿಧಾನ ಸೌಧದ ಮುಂಭಾಗದಲ್ಲಿ ನವೆಂಬರ್ ಒಂದರಂದು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿದ ಪ್ರಶಸ್ತಿ ವಿತರಿಸಲಾಗುವುದು. ಈ ಸಂದರ್ಭದಲ್ಲಿ ಬೇರೆ ಚಿತ್ರರಂಗಗಳ ಸ್ಟಾರ್ ನಟರನ್ನು ಆಹ್ವಾನಿಸುವುದು ಸರ್ಕಾರದ ಉದ್ದೇಶವಾಗಿದ್ದು, ಈ ಹಿನ್ನೆಲೆಯಲ್ಲಿ ರಜನಿಕಾಂತ್ ಮತ್ತು ಜ್ಯೂ.ಎನ್ಟಿಆರ್ ಅವರನ್ನು ಆಹ್ವಾನಿಸಲಾಗುತ್ತದಂತೆ. ಇಂದು ಈ ಕುರಿತು ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಯಾರನ್ನು ಆಹ್ವಾನಿಸಬೇಕು ಎಂದು ಚರ್ಚೆ ನಡೆಸಿ, ಆ ನಂತರ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.