

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನನ್ನು ಅಪಹರಿಸಿ, ಮನಬಂದಂತೆ ಥಳಿಸಿ, ಕೊಲೆ ಮಾಡಿರುವ ಆರೋಪದ ಮೇಲೆ ಬಂಧನವಾಗಿರುವ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಮತ್ತು ಅವರ ಸಹಚರರನ್ನು ನಿನ್ನೆ (ಜೂನ್ 15) ಕೋರ್ಟ್ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ್ದು, ವಿಚಾರಣೆ ಮುಂದುವರಿದಿದೆ. ಇದರ ನಡುವೆ ದರ್ಶನ್ ಬಗ್ಗೆ ಒಂದೊಂದೆ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ಮೈಸೂರಿನ ಬಳಿಯಿರುವ ದರ್ಶನ್ ಅವರ ತೂಗುದೀಪ ಫಾರ್ಮ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಎತ್ತಿನ ಕೊಂಬು ಚುಚ್ಚಿ ಗಾಯವಾದಾಗ ದರ್ಶನ್ ಸಹಾಯ ಮಾಡಲಿಲ್ಲ ಎಂಬ ಆರೋಪ ಮೊನ್ನೆಯಷ್ಟೇ ಕೇಳಿಬಂತು. ಅಲ್ಲದೆ, ಸಹಾಯ ಕೇಳಲು ಹೋದಾಗ ನಾಯಿ ಛೂ ಬಿಟ್ಟಿದ್ದರು ಎಂದು ಸಂತ್ರಸ್ತನ ಸಂಬಂಧಿಕರು ಮಾಧ್ಯಮದ ಮುಂದೆ ಬಾಯ್ಬಿಟ್ಟಿದ್ದರು. ಪೊನ್ನಂಪೇಟೆಯಲ್ಲಿರುವ ದರ್ಶನ್ ಅವರ ಪೂರ್ವಿಕರ ನಿವಾಸವನ್ನು ಕೆಡವಿದ್ದಾರೆ ಎಂದು ಆರೋಪಿಸಲಾಗಿದೆ.
ಹೀಗೆ ಒಂದೊಂದೆ ಆರೋಪಗಳು ದರ್ಶನ್ ವಿರುದ್ಧ ಕೇಳಿಬರುತ್ತಿದ್ದು, ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಈ ಬಾರಿ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು ಟಿವಿ ರಿಯಾಲಿಟಿ ಶೋ ನಲ್ಲಿ ಜಡ್ಜ್ ಆಗಿರುವ ನನ್ನ ಸ್ನೇಹಿತನಿಗೆ 2 ವರುಷದ ಹಿಂದೆ ಹಾರ್ಟ್ ಅಟ್ಯಾಕ್ ಆಗಿತ್ತು. ಅದಕ್ಕೆ ಕಾರಣ ರೌಡಿ ಬಾಸ್. ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ ಎಂದು ಪ್ರಶಾಂತ್ ಸಂಬರಗಿ ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ.
ಅಷ್ಟಕ್ಕೂ ಸಂಬರಗಿ ಹೇಳಿದ ಆ ಮ್ಯೂಸಿಕೆ ಡೈರೆಕ್ಟರ್ ಯಾರಿರಬಹುದು ಎಂದು ಕೆಲವರು ಊಹೆ ಮಾಡುತ್ತಿದ್ದಾರೆ. ಕೆಲವರು ಅರ್ಜುನ್ ಜನ್ಯ ಇರಬಹುದೇನೋ ಎಂದು ಗೆಸ್ ಮಾಡುತ್ತಿದ್ದಾರೆ. ಆದರೆ, ಸಂಬರಗಿ ಅವರ ಹೇಳಿಕೆ ದರ್ಶನ್ ಅಭಿಮಾನಿಗಳನ್ನು ಕೆರಳಿಸಿದ್ದು, ಕೆಟ್ಟ ಕೆಟ್ಟ ಕಾಮೆಂಟ್ಗಳ ಮೂಲಕ ಸಂಬರಗಿ ಅವರನ್ನು ಟಾರ್ಗೆಟ್ ಮಾಡಿದ್ದಾರೆ.
ಏನಿದು ಪ್ರಕರಣ?
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.