

ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಸಿನಿಮಂದಿಯ ಗಮನ ಸೆಳೆದಿರುವ ‘ಕರ್ಕಿ’ ಸಿನಿಮಾ ತೆರೆಗೆ ಬರಲು ಭರದ ಸಿದ್ದತೆ ನಡೆಸುತ್ತಿದೆ. ಸದ್ಯ ನಿಧಾನವಾಗಿ ‘ಕರ್ಕಿ’ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗಷ್ಟೆ ಮೊದಲ ಹಂತದಲ್ಲಿ ಟೀಸರ್ ಮತ್ತು ಟ್ರೇಲರ್ ಬಿಡುಗಡೆ ಮಾಡಿದೆ. ಹಾಡುಗಳಿಗೆ ಸಾಹಿತ್ಯ ರಚಿಸಿರುವ ಕವಿರಾಜ್, ‘ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್ ‘ಕರ್ಕಿ’ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಈ ಚಿತ್ರದ ಎಲ್ಲ ಆರು ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪವಿತ್ರನ್ ಅವರಂಥ ನಿರ್ದೇಶಕರ ಜೊತೆ ಕೆಲಸ ಮಾಡಲು ‘ಕರ್ಕಿ’ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದು, ನನಗೂ ಹೊಸ ಅನುಭವ ನೀಡಿದೆ. ಪ್ರತಿ ಹಾಡಿನ ಒಂದೊಂದು ಪದವನ್ನೂ ಅವರು ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, ‘ಕರ್ಕಿ’ ನೋಡುಗರಿಗೆ ಹೊಸ ಅನುಭವ ಕೊಡಲಿದೆ’ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ‘ವಾಟ್ಸಾಪ್ ಲವ್’, ‘ರಾಜರಾಣಿ’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್ ರೆಡ್ಡಿ (ಜೆ.ಪಿ) ‘ಕರ್ಕಿ’ಯ ನಾಯಕ. ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಅವರು ಅಭಿನಯಿಸಿದ್ದು, ‘ನನ್ನದು ಮುತ್ತುರಾಜ್ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನ ಮುಟ್ಟುವಂತೆ ಈ ಚಿತ್ರದಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನಿಮಾ ಸಾಗುತ್ತದೆ. ಆದಷ್ಟು ನೈಜವಾಗಿ ಕಥೆ, ಪಾತ್ರಗಳು ಮೂಡಿಬಂದಿವೆ’ ಎಂದು ಹೇಳಿಕೊಂಡರು.
ಜೆಪಿಗೆ ಮಲೆಯಾಳಿ ನಟಿ ಮೀನಾಕ್ಷಿ ನಾಯಕಿಯಾಗಿದ್ದು, ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು ‘ಕರ್ಕಿ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹೃಷಿಕೇಶ ಛಾಯಾಗ್ರಹಣ, ಶ್ರೀ ಕ್ರೇಜಿಮೈಂಡ್ಸ್ ಸಂಕಲನ ಮತ್ತು ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಶಿವಮೊಗ್ಗ, ದಾವಣಗೆರೆ, ಬಂಗಾರಪೇಟೆ, ಕೋಲಾರ, ಬಾಗಲಕೋಟೆ ಸುತ್ತಮುತ್ತ ‘ಕರ್ಕಿ’ ಸಿನೆಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.