ನನ್ನ ನಂಬಿಕೆ ಹುಸಿಯಾಗಿದೆ: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Siddaramaiah Leelavathy
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಲೀಲಾವತಿ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಂಜೆ ನಿಧನರಾಗಿದ್ದಾರೆ. ಲೀಲಾವತಿ ಅವರು ಇರುವರೆಗೂ ಅವರಿಗಾಗಿಯೇ ಪ್ರತಿಕ್ಷಣ ಬದುಕಿದ್ದ ಪುತ್ರ ವಿನೋದ್​ ರಾಜ್​ ಅವರನ್ನು ಅಗಲಿ, ಬಾರದ ಲೋಕಕ್ಕೆ ಪಯಣಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಲೀಲಾವತಿ ಅವರು ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹಾಸಿಗೆ ಹಿಡಿದಿದ್ದರು. ನಟ ಶಿವರಾಜ್​ ಕುಮಾರ್​, ನಟ ದರ್ಶನ್​, ದೊಡ್ಡಣ, ಅರ್ಜುನ್​ ಸರ್ಜಾ, ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​ ಸೇರಿದಂತೆ ಚಿತ್ರರಂಗದ ಗಣ್ಯರು ನೆಲಮಂಗಲದಲ್ಲಿರುವ ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇತ್ತೀಚೆಗಷ್ಟೇ ಲೀಲಾವತಿ ಅವರ ಕನಸಿನ ಪಶುವೈದ್ಯಕೀಯ ಆಸ್ಪತ್ರೆಯನ್ನು ಡಿಸಿಎಂ ಡಿಕೆಶಿ ಅವರು ಉದ್ಘಾಟನೆ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net